ಉದಯವಾಹಿನಿ,ಮೈಸೂರು : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಹತ್ವಾಕಾಂಕ್ಷೆ ಯೋಜನೆ ಇಂದಿರಾ ಕ್ಯಾಂಟೀನ್‌ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಡಾ ಎಚ್‌ಸಿ ಮಹದೇವಪ್ಪ ಮಾಹಿತಿ ನೀಡಿದ್ದಾರೆ. ಮೈಸೂರಿನಲ್ಲಿ ಆಯೋಜಿಸಿದ್ದ ಮಾಧ್ಯಮ ಸಂವಾದದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕ್ಯಾಂಟೀನ್‌ನಲ್ಲಿ ಮಾಂಸಾಹಾರ ಪೂರೈಕೆ ಬಗ್ಗೆ ಇನ್ನೂ ಏನು ತೀರ್ಮಾನಿಸಿಲ್ಲ, ಇಂದಿರಾ ಕ್ಯಾಂಟೀನ್‌ನಲ್ಲಿ ಸರ್ಕಾರದಿಂದ ಸಸ್ಯಾಹಾರದ ಊಟ ಕೊಡುತ್ತೇವೆ. ಹೊರಗಡೆಯಿಂದ ಮಾಂಸಾಹಾರ ತಂದು ಇಂದಿರಾ ಕ್ಯಾಂಟೀನ್‌ನಲ್ಲಿ ತಿನ್ನಬಹುದು ಎಂದರು.
ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಇಂದಿರಾ ಕ್ಯಾಂಟೀನ್ ಶುರು ಮಾಡುವ ಪ್ರಸ್ತಾಪವಿದ್ದು, ಮಾಂಸಾಹಾರ ನೀಡುವ ಬಗ್ಗೆ ಸದ್ಯಕ್ಕೆ ಚಿಂತನೆ ಇಲ್ಲ, ಇನ್ನೂ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿ ನೀಡಲು ತೀರ್ಮಾನಿಸಿದ್ದೇವೆ. ಕೇಂದ್ರ ಸರ್ಕಾರ ಅಕ್ಕಿ ನೀಡಲು ಹಿಂದೇಟು ಹಾಕಿದೆ. ಮುಖ್ಯಮಂತ್ರಿಗಳು ಕೇಂದ್ರ ಸರ್ಕಾರದೊಂದಿಗೆ ಮಾತನಾಡುತ್ತಿದ್ದಾರೆ. ಕೇಂದ್ರ ಸರ್ಕಾರ ನಕಾರಾತ್ಮಕವಾಗಿ ಪ್ರತಿಕ್ರಿಯಿಸಿದರೆ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.
