ಉದಯವಾಹಿನಿ, ಕೋಲಾರ: ಆಪರೇಷನ್ ಸಿಂಧೂರ್ ಹೆಸರಲ್ಲಿ ಭಾರತ ಬೂಟಾಟಿಕೆಗೆ ನಾಲ್ಕು ಯುದ್ಧ ವಿಮಾನಗಳನ್ನು ಪಾಕ್ ಮೇಲೆ ಕಳುಹಿಸಿದ್ದು ಬಿಟ್ಟರೆ ಮತ್ತೇನು ಮಾಡಿಲ್ಲ. 26 ಜನ ಮಹಿಳೆಯರ ಅರಶಿನ ಕುಂಕುಮಕ್ಕೆ ಬೆಲೆ ಇಷ್ಟೇನಾ ಎಂದು ಕಾಂಗ್ರೆಸ್ ಶಾಸಕ ಕೊತ್ತೂರು ಮಂಜುನಾಥ್ ಪ್ರಶ್ನಿಸಿದ್ದು ಈ ಮೂಲಕ ಭಾರತೀಯ ಸೇನೆಯ ‘ಆಪರೇಷನ್ ಸಿಂದೂರ್’ ಕಾರ್ಯಾಚರಣೆಯನ್ನು ಲೇವಡಿ ಮಾಡಿದ್ದಾರೆ. ಭಾರತೀಯ ಸೇನೆಯ ಆತ್ಮಸ್ಥೈರ್ಯವನ್ನು ಕುಗ್ಗಿಸುವಂತಹ ಕೊತ್ತೂರು ಮಂಜುನಾಥ್ ಇಂತಹ ಹೇಳಿಕೆಗಳ ವಿರುದ್ಧ ವ್ಯಾಪಕ ಆಕ್ಷೇಪ ವ್ಯಕ್ತವಾಗುತ್ತಿದೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಪ್ರಜೆಗಳ ಮೇಲೆ ಯುದ್ದ ಮಾಡುವುದಕ್ಕೆ ನಮ್ಮ ವಿರೋಧವಿದೆ. ಆದರೆ, ನಮ್ಮ ದೇಶದೊಳಗೆ ಬಂದು ಪತ್ನಿಯರ ಎದುರೇ ಪತಿಯರನ್ನು ಸಾಯಿಸಿದರೆ ಹೇಗೆ ಸಹಿಸುವುದು? ಆ ಹೆಣ್ಣು ಮಕ್ಕಳು ಗಟ್ಟಿಯಾಗಿರುವುದಕ್ಕೆ ಪರವಾಗಿಲ್ಲ. ಇಲ್ಲಾ ಅಂದರೆ ಹೃದಯಾಘಾತದಿಂದ ಆಗಿ ಸಾಯುತ್ತಿದ್ದರು. ಅಂತಹದಕ್ಕೆ ಪರಿಹಾರ ಇದಲ್ಲ. ಬೇರಿನಿಂದ ಕೊಂಬೆ ತನಕ ಎಲ್ಲವನ್ನೂ ಹೊಡೆಯಬೇಕು. ಈ ಬಾರಿ ಒಳ್ಳೆಯ ಅವಕಾಶ ಇತ್ತು. ಆದರೆ ಏನೂ ಮಾಡಿಲ್ಲ ಎಂಬುದು ಬೇಸರ ತಂದಿದೆ ಎಂದು ಮಂಜುನಾಥ್ ಹೇಳಿದ್ದರು. ಪಾಕಿಸ್ತಾನದ ಮೇಲೆ ವಾಯುದಾಳಿ ನಡೆಸಿದ್ದು ಅದರಲ್ಲಿ ನೂರಕ್ಕೂ ಹೆಚ್ಚು ಉಗ್ರರನ್ನು ಕೊಂದಿರುವುದಾಗಿ ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಇದು ಎಲ್ಲೂ ದೃಢಪಟ್ಟಿಲ್ಲ ಎಂದು ಆಪರೇಷನ್ ಸಿಂಧೂರ್ ಬಗ್ಗೆ ಅನುಮಾನ ವ್ಯಕ್ತಪಡಿಸಿದರು. ನಮ್ಮ ಜಾಗಕ್ಕೆ ಬಂದು ನಮ್ಮನ್ನು ಹೊಡೆದು ತಪ್ಪಿಸಿಕೊಂಡು ಹೋಗುತ್ತಾರೆ ಎಂದರೆ ಅದು ನಮ್ಮ ಭದ್ರತಾ ವೈಪಲ್ಯ. ಗಡಿಯಲ್ಲಿ ಸೇನೆ ಏನ್ ಮಾಡುತ್ತಾ ಇತ್ತು? ಇವರೆ ಏನಾದರೂ ಪ್ಲಾನ್ ಮಾಡಿದರಾ? ಯಾವುದು ನಿಜ ಯಾವುದು ಸುಳ್ಳು ನಮಗೆ ಗೊತ್ತಾಗುತ್ತಿಲ್ಲ. ಆದರೆ, ಭಾರತ ಕೊಟ್ಟ ಪ್ರತ್ಯುತ್ತರ ಸಮಾಧಾನಕರವಾದ ಕ್ರಮ ಅಲ್ಲ. ಉಗ್ರವಾದವನ್ನು ಬೇರು ಸಮೇತ ಕಿತ್ತೊಗೆಯಲು ಒಳ್ಳೆಯ ಅವಕಾಶ ಇತ್ತು. ಆದರೆ, ನಮ್ಮ ನಿರೀಕ್ಷೆ ಹುಸಿಯಾಗಿದೆ ಎಂದರು.

Leave a Reply

Your email address will not be published. Required fields are marked *

error: Content is protected !!