ಉದಯವಾಹಿನಿ, ಭುವನೇಶ್ವರ: ಒಡಿಶಾ ರಾಜ್ಯದಲ್ಲಿ ಭಾರಿ ಮಳೆ ಮತ್ತು ಗುಡುಗು ಸಹಿತ ಸಿಡಿಲು ಬಡಿತದ ಘಟನೆಗಳಲ್ಲಿ ಆರು ಮಹಿಳೆಯರು ಸೇರಿದಂತೆ ಕನಿಷ್ಠ ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ. ಕೊರಾಪುಟ್ ಜಿಲ್ಲೆಯಲ್ಲಿ ಮೂವರು, ಜಾಜ್ ಪುರ ಮತ್ತು ಗಂಜಾಂ ಜಿಲ್ಲೆಗಳಲ್ಲಿ ತಲಾ ಇಬ್ಬರು ಮತ್ತು ಧೆಂಕನಲ್ ಮತ್ತು ಗಜಪತಿ ಜಿಲ್ಲೆಗಳಲ್ಲಿ ತಲಾ ಒಬ್ಬರು ಸಾವನ್ನಪ್ಪಿದ್ದಾರೆ ಮತ್ತು ಕೆಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೊರಾಪುಟ್ ಜಿಲ್ಲೆಯ ಲಕ್ಷ್ಮಿಪುರ ಪೊಲೀಸ್ ಠಾಣೆ ಪ್ರದೇಶದ ಪರಿಡಿಗುಡ ಗ್ರಾಮದಲ್ಲಿ ಸಿಡಿಲು ಬಡಿದು ಮೂವರು ಮಹಿಳೆಯರು ಸಾವನ್ನಪ್ಪಿದ್ದಾರೆ ಮತ್ತು ವೃದ್ದರೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಮೂಲಗಳ ಪ್ರಕಾರ, ಒಂದೇ ಕುಟುಂಬದ ಸದಸ್ಯರಾಗಿದ್ದ ಇವರು ಭಾರೀ ಮಳೆ ನಡುವೆ ಹೊಲಗಳಲ್ಲಿ ಕೆಲಸ ಮಾಡುವಾಗ ತಾತ್ಕಾಲಿಕ ಗುಡಿಸಲಿನಲ್ಲಿ ಆಶ್ರಯ ಪಡೆದಿದ್ದರು. ಈ ವೇಳೆ ಗುಡಿಸಲಿಗೆ ಸಿಡಿಲು ಬಡಿದು ಮೂವರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
