ಉದಯವಾಹಿನಿ, ರಾಯಚೂರು: ಮಹಾರಾಷ್ಟ್ರ ಸೇರಿದಂತೆ ಪಶ್ಚಿಮ ಘಟ್ಟಗಳಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ನಾರಾಯಣ ಜಲಾಶಯಕ್ಕೆ ಒಳಹರಿವು ಹೆಚ್ಚಾಗಿದೆ. ಇದರಿಂದಾಗಿ 25 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ 75 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದೆ. ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಬಳಿಯಿರುವ ಬಸವಸಾಗರ ಜಲಾಶಯ 492.25 ಮೀ. ಗರಿಷ್ಠ ಸಂಗ್ರಹ ಸಾಮರ್ಥ್ಯ ಹೊಂದಿದ್ದು, ಸದ್ಯ 490.47 ಮೀ. ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 75 ಸಾವಿರ ಕ್ಯುಸೆಕ್ ಒಳಹರಿವು ಇದೆ. ಸದ್ಯ 77.37ರಷ್ಟು ಜಲಾಶಯ ಭರ್ತಿಯಾದ ಹಿನ್ನೆಲೆ ಹೊರಹರಿವು ಹೆಚ್ಚಾಗುವ ಸಾಧ್ಯತೆಯಿದೆ. ಹೀಗಾಗಿ ಜಲಾಶಯದಿಂದ ಹಂತ ಹಂತವಾಗಿ ಕೃಷ್ಣಾ ನದಿಗೆ ಹೆಚ್ಚಿನ ಪ್ರಮಾಣದ ನೀರು ಹರಿಬಿಡಲಾಗುತ್ತಿದೆ. ಈಗಾಗಲೇ ಡ್ಯಾಂನ 25 ಗೇಟ್‌ಗಳ ಮೂಲಕ ಕೃಷ್ಣಾ ನದಿಗೆ (Krishna River) 75 ಸಾವಿರ ಕ್ಯುಸೆಕ್ ನೀರು ಬಿಡುಗಡೆ ಮಾಡಲಾಗಿದ್ದು, ರಾಯಚೂರಿನ ಕೃಷ್ಣಾ ನದಿ ಪಾತ್ರದ ಗ್ರಾಮಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ನದಿ ಪಾತ್ರಕ್ಕೆ ತೆರಳದಂತೆ ಜಿಲ್ಲಾಡಳಿತದಿಂದ ನಿರಂತವಾಗಿ ಎಚ್ಚರಿಕೆ ನೀಡುತ್ತಿದೆ.
