ಉದಯವಾಹಿನಿ, ಬೆಂಗಳೂರು: ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ಮರು ನಾಮಕರಣ ಮಾಡಿದ್ದ ಸರ್ಕಾರ ಈಗ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ಬೆಂಗಳೂರು ಉತ್ತರ ಜಿಲ್ಲೆ ಎಂದು ಮರು ನಾಮಕರಣ ಮಾಡಿದೆ. ಸಿದ್ದರಾಮಯ್ಯ ನೇತೃತ್ವದಲ್ಲಿ ನಂದಿಗಿರಿಧಾಮದಲ್ಲಿ ನಡೆದ ಕ್ಯಾಬಿನೆಟ್ ಸಭೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ‘ಬೆಂಗಳೂರು ಉತ್ತರ’ ಜಿಲ್ಲೆಯನ್ನಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಹೆಸರನ್ನು ಭಾಗ್ಯನಗರ ಎಂದು ನಾಮಕರಣ ಮಾಡುವುದಕ್ಕೆ ಅನುಮೋದನೆ ನೀಡಿದೆ.
1986ರಲ್ಲಿ ಬೆಂಗಳೂರು ನಗರ ಜಿಲ್ಲೆಯಿಂದ ಪ್ರತ್ಯೇಕಿಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ರಚಿಸಲಾಗಿತ್ತು. ಈ ವೇಳೆ ರಾಮನಗರ ಜಿಲ್ಲೆಯ ತಾತಾಲೂಕುಗಳು ಗ್ರಾಮಾಂತರ ಜಿಲ್ಲೆಯ ವ್ಯಾಪ್ತಿಗೆ ಒಳಪಟ್ಟಿದ್ದವು. 2007ರಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯನ್ನು ವಿಭಜಿಸಿ ಹೊಸದಾಗಿ ರಾಮನಗರ ಜಿಲ್ಲೆ ರಚಿಸಲಾಗಿತ್ತು.ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿಯ ಹೆಸರನ್ನು ‘ಭಾಗ್ಯನಗರ’ ಎಂದು ಬದಲಿಸುವಂತೆ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಿದ್ದರು. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಬಾಗೇಪಲ್ಲಿಆಂಧ್ರಪ್ರದೇಶದ ಗಡಿಗೆ ಹೊಂದಿಕೊಂಡಿದೆ. ಪಲ್ಲಿ ಎಂದರೆ ತೆಲುಗು ಭಾಷೆಯಲ್ಲಿ ಹಳ್ಳಿ ಎಂದರ್ಥ. ಹೀಗಾಗಿ ಈ ಹೆಸರನ್ನು ಬದಲಿಸಬೇಕು ಎಂದು 2020ರಲ್ಲಿ ತಾಲೂಕಿನಲ್ಲಿ ಅಭಿಯಾನವೇ ಆರಂಭವಾಗಿತ್ತು.
