ಉದಯವಾಹಿನಿ, ಬೆಂಗಳೂರು: ಪಕ್ಷದ ಶಿಸ್ತು ಉಲ್ಲಂಘಿಸಿ ಯಾರೊಬ್ಬರೂ ಬಹಿರಂಗ ಹೇಳಿಕೆ ನೀಡಬಾರದು ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಅವರು ಬಿಜೆಪಿ ನಾಯಕರಿಗೆ ಶಿಸ್ತಿನ ಪಾಠ ಮಾಡಿದ್ದಾರೆ. ಮಲ್ಲೇಶ್ವರಂನಲ್ಲಿರುವ ಬಿಜೆಪಿ ಕಚೇರಿಯಲ್ಲಿ ಬಾಗಲಕೋಟೆ ಮತ್ತು ದಾವಣಗೆರೆ ಜಿಲ್ಲಾ ಘಟಕದಲ್ಲಿ ಉಂಟಾಗಿರುವ ಬಿಕ್ಕಟ್ಟು ಪರಿಹಾರ ಕುರಿತಂತೆ ಪ್ರಮುಖರ ಜೊತೆ ಸಭೆ ನಡೆಸಿದರು.ಮೊದಲು ಬಾಗಲಕೋಟೆ ಜಿಲ್ಲಾ ಬಿಜೆಪಿ ಘಟಕದ ನಾಯಕರ ಜೊತೆ ಜೋಷಿಯವರು ಸಭೆ ನಡೆಸಿದರು. ಮೊದಲು ಮಾಜಿ ಶಾಸಕ ವೀರಣ್ಣ ಚರಂತಿಮಠ ಹಾಗೂ ಬೆಂಬಲಿಗರ ಜೊತೆ ಮಾಹಿತಿ ಪಡೆದುಕೊಂಡರು. ನಂತರ ವಿಧಾನಪರಿಷತ್ ಸದಸ್ಯ ಟಿ.ಎಚ್.ಪೂಜಾರ್ ಹಾಗೂ ಬೆಂಬಲಿಗರ ಜೊತೆ ಪ್ರತ್ಯೇಕ ಸಭೆ ನಡೆಸಿ ಅಭಿಪ್ರಾಯ ಪಡೆದುಕೊಂಡರು.
ಬಾಗಲಕೋಟೆ ಜಿಲ್ಲಾ ಬಿಜೆಪಿಯಲ್ಲಿ ಚರಂತಿಮಠ ಮತ್ತು ಪೂಜಾರ್ ನಡುವೆ ಉಂಟಾಗಿರುವ ಬಿಕ್ಕಟ್ಟನ್ನು ಪರಿಹರಿಸಲು ಈ ಸಭೆ ನಡೆಸಲಾಯಿತು. ನಂತರ ಮಧ್ಯಾಹ್ನ ಜೋಷಿ ಅವರು ದಾವಣಗೆರೆ ಜಿಲ್ಲಾ ಘಟಕದ ಪ್ರಮುಖರ ಜೊತೆ ಸಭೆ ನಡೆಸಿ ಪಕ್ಷದೊಳಗೆ ಉಂಟಾಗಿರುವ ಭಿನ್ನಮತವನ್ನು ಶಮನಗೊಳಿಸುವ ಪ್ರಯತ್ನ ಮಾಡಿದರು. ಮಾಜಿ ಸಚಿವರಾದ ಎಸ್.ಎ.ರವೀಂದ್ರನಾಥ್, ಎಂ.ಪಿ.ರೇಣಕಾಚಾರ್ಯ, ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಸೇರಿದಂತೆ ಹಲವು ಪ್ರಮುಖರು ಭಾಗಿಯಾಗಿದ್ದರು.
ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಪಕ್ಷಕ್ಕೆ ಉಂಟಾದ ಹಿನ್ನಡೆಗೆ ಕಾರಣ ಏನೆಂಬುದರ ಬಗ್ಗೆ ಮಾಹಿತಿ ಪಡೆದುಕೊಂಡರು.
