ಉದಯವಾಹಿನಿ, ಬೆಂಗಳೂರು: ಪ್ರಧಾನಿ ಮೋದಿ ಜೀ ಅವರು ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಕನಸನ್ನು ನನಸಾಗಿಸಿದ್ದಾರೆ. ಇದು ಪ್ರತಿಯೊಬ್ಬ ರಾಷ್ಟ್ರೀಯವಾದಿ ಭಾರತೀಯರಿಗೆ ಹೆಮ್ಮೆಯ ಸಂಗತಿ ಎಂದು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಮತ್ತು ರಾಜ್ಯದ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಪ್ರಯುಕ್ತ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ನಡೆದ ಕಾರ್ಯಕ್ರಮದಲ್ಲಿ ಡಾ. ಮುಖರ್ಜಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಿದರು.
ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜೀವನವೇ ಒಂದು ಸಂದೇಶ. ಅವರ ಚಿಂತನೆಗಳಿಂದ ಇಂದು ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತನೂ ಧೈರ್ಯವಂತರಾಗಿ ದೇಶ ಮೊದಲು ಎಂಬ ಸಿದ್ಧಾಂತಕ್ಕೆ ಬದ್ಧರಾಗಿದ್ದಾರೆ. ಡಾ. ಮುಖರ್ಜಿ ಅವರು ದೇಶದ ಏಕತೆ, ಸಮಗ್ರತೆ, ಸಾಂಸ್ಕೃತಿಕ ಹಿರಿಮೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟ ಶ್ರೇಷ್ಠ ರಾಷ್ಟ್ರೀಯ ನಾಯಕ ಎಂದು ತಿಳಿಸಿದರು.
ನಮ್ಮ ಪಕ್ಷಕ್ಕೆ ಸೈದ್ಧಾಂತಿಕ ಅಡಿಪಾಯ ಹಾಕಿ ಕೊಟ್ಟ ಭಾರತೀಯ ಜನಸಂಘದ ಸ್ಥಾಪಕರು. ದೇಶದ ರಾಜಕಾರಣದಲ್ಲಿ ಒಂದು ಬಲಿಷ್ಠ ರಾಷ್ಟ್ರೀಯವಾದಿ ಸಿದ್ಧಾಂತ ಇರುವ ರಾಜಕೀಯ ಪರಿವಾರಕ್ಕೆ ನಾಂದಿ ಹಾಡಿದವರು. 370ನೇ ವಿಧಿಯನ್ನು ವಿರೋಧಿಸಿ ಜಮ್ಮು ಮತ್ತು ಕಾಶ್ಮೀರವನ್ನು ಭಾರತದೊಂದಿಗೆ ಸಂಪೂರ್ಣವಾಗಿ ಒಗ್ಗೂಡಿಸಲು ಗಟ್ಟಿಯಾಗಿ ನಿಂತು, ಅದಕ್ಕಾಗಿ ತಮ್ಮ ಪ್ರಾಣವನ್ನೇ ಸಮರ್ಪಿಸಿದ ಧೀಮಂತ ನಾಯಕ ಎಂದು ಯಡಿಯೂರಪ್ಪ ನೆನಪಿಸಿದರು.
