ಉದಯವಾಹಿನಿ, ಹಾವೇರಿ: ‘ಮುಖ್ಯಮಂತ್ರಿಯವರು ಘೋಷಣೆ ಮಾಡಿದಂತೆ ಕನಿಷ್ಠ ₹ 10,000 ಗೌರವಧನ ಮತ್ತು ಬಜೆಟ್‌ನಲ್ಲಿ ಉಲ್ಲೇಖಿಸಿದ್ದಂತೆ ₹ 1,000 ಗೌರವಧನ ಹೆಚ್ಚಳದ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು’ ಎಂದು ಆಗ್ರಹಿಸಿ ಜಿಲ್ಲೆಯ ಆಶಾ ಕಾರ್ಯಕರ್ತೆಯರು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ನಗರದ ಹೊರವಲಯದಲ್ಲಿರುವ ಜಿಲ್ಲಾಧಿಕಾರಿ ಕಚೇರಿ ಎದುರು ಸೇರಿದ್ದ ಪ್ರತಿಭಟನಕಾರರು, ತಮ್ಮ ಬೇಡಿಕೆ ಈಡೇರಿಕೆಗಾಗಿ ಘೋಷಣೆ ಕೂಗಿದರು. ಸುರಿವ ಮಳೆಯಲ್ಲಿಯೇ ಕುಳಿತು ಪ್ರತಿಭಟನೆ ನಡೆಸಿ, ಆಕ್ರೋಶ ಹೊರಹಾಕಿದರು. ಎಐಯುಟಿಯುಸಿಯ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಈ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ‘ಜನವರಿಯಲ್ಲಿ ರಾಜ್ಯ ಮಟ್ಟದ ಪ್ರತಿಭಟನೆ ನಡೆಸಲಾಗಿತ್ತು. ಬೇಡಿಕೆ ಈಡೇರಿಸುವ ಬಗ್ಗೆ ಭರವಸೆ ನೀಡಿದ್ದರಿಂದ ಸಂಘದ ಮುಖಂಡರು, ಮುಖ್ಯಮಂತ್ರಿ ಮಾತಿನಂತೆ ಆರೋಗ್ಯ ಸಚಿವ ಮತ್ತು ಉನ್ನತ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದರು. ಏಪ್ರಿಲ್ 1ರಿಂದ ಜಾರಿಯಾಗುವಂತೆ ಕನಿಷ್ಠ ₹ 10,000 ಗೌರವಧನವನ್ನು ನೀಡಲಾಗುವುದು. ಹೆಚ್ಚುವರಿ ಕೆಲಸಕ್ಕೆ ನೀಡುವ ಭತ್ಯೆಯನ್ನು ಹೆಚ್ಚಿಸುವುದಾಗಿ ಹೇಳಿದ್ದರು. ಆದರೆ, ಮುಖ್ಯಮಂತ್ರಿಯವರು ಕೊಟ್ಟ ಮಾತು ಉಳಿಸಿಕೊಂಡಿಲ್ಲ. ಇದುವರೆಗೂ ಗೌರವಧನ ಹೆಚ್ಚಳದ ಬಗ್ಗೆ ಆದೇಶ ಹೊರಡಿಸಿಲ್ಲ’ ಎಂದು ಪ್ರತಿಭಟನಕಾರರು ದೂರಿದರು..

Leave a Reply

Your email address will not be published. Required fields are marked *

error: Content is protected !!