ಉದಯವಾಹಿನಿ,ಪುರಿ, : ಒಡಿಶಾದಲ್ಲಿ ಅಪರಾಧ ಪ್ರಕರಣಗಳು ಹೆಚ್ಚುತ್ತಲೇ ಇದ್ದು, ಕೆಲವು ದಿನಗಳ ಹಿಂದಷ್ಟೇ ಪ್ರಾಧ್ಯಾಪಕರ ಲೈಂಗಿಕ ಕಿರುಕುಳ ತಾಳಲಾರದೆ ಕಾಲೇಜು ವಿದ್ಯಾರ್ಥಿನಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಳು. ಇದೀಗ 15 ವರ್ಷದ ಬಾಲಕಿಯ ಮೇಲೆ ಪೆಟ್ರೋಲ್ ಸುರಿದು ಮೂವರು ಆಕೆಗೆ ಬೆಂಕಿ ಹಚ್ಚಿದ್ದಾರೆ. ಶೇ. 70ರಷ್ಟು ಸುಟ್ಟ ಗಾಯಗಳಿಂದ ಬಳಲುತ್ತಿರುವ ಆ ಅಪ್ರಾಪ್ತ ಬಾಲಕಿ ಭುವನೇಶ್ವರದ ಏಮ್ಸ್‌ಗೆ ದಾಖಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ಆ ಬಾಲಕಿ ತನ್ನ ಸ್ನೇಹಿತನ ಮನೆಗೆ ಹೋಗುತ್ತಿದ್ದಾಗ ಬಯಾಬರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮೂವರು ದುಷ್ಕರ್ಮಿಗಳು ಆಕೆಯನ್ನು ಅಡ್ಡಗಟ್ಟಿ, ಭಾರ್ಗವಿ ನದಿಯ ದಡಕ್ಕೆ ಕರೆದೊಯ್ದು ಬೆಂಕಿ ಹಚ್ಚಿದ್ದಾರೆ.ಬಲಂಗಾ ಪೊಲೀಸ್ ಠಾಣೆಯಿಂದ ಕೇವಲ 1.5 ಕಿ.ಮೀ ದೂರದಲ್ಲಿ ಈ ಘಟನೆ ನಡೆದಿದೆ. ಈ ಘಟನೆಯ ನಂತರ ಮೂವರು ಪರಾರಿಯಾಗಿದ್ದಾರೆ. ಪೊಲೀಸರು ದುಷ್ಕರ್ಮಿಗಳಿಗಾಗಿ ಹುಡುಕಾಟ ನಡೆಸಿದ್ದಾರೆ. ಬಾಲಕಿಯ ಬೆನ್ನು, ಹೊಟ್ಟೆ ಮತ್ತು ಇತರ ಭಾಗಗಳಿಗೆ ಸುಟ್ಟ ಗಾಯಗಳಾಗಿವೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಆ ಬಾಲಕಿಯನ್ನು ಅಪಹರಿಸಿ, ನದಿಯ ಬಳಿ ಕಟ್ಟಿಹಾಕಿ ಬೆಂಕಿ ಹಚ್ಚಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ. ಈ ಘಟನೆ ಅವರ ಮನೆಯಿಂದ ಕೇವಲ 500 ಮೀಟರ್ ದೂರದಲ್ಲಿ ನಡೆದಿದೆ ಎನ್ನಲಾಗಿದೆ. “ನನ್ನ ತಂಗಿ ತನ್ನ ಗೆಳತಿಯ ಮನೆಗೆ ಕೆಲವು ಪುಸ್ತಕಗಳನ್ನು ತೆಗೆದುಕೊಂಡು ಹೋಗುತ್ತಿದ್ದಳು. ದಾರಿಯಲ್ಲಿ ಮೂವರು ವ್ಯಕ್ತಿಗಳು ಅವಳನ್ನು ಅಪಹರಿಸಿದರು. ಅವರು ಅವಳನ್ನು ನದಿಯ ಬಳಿ ಕಟ್ಟಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದರು. ಅವಳ ಮೇಲೆ ಏಕೆ ದಾಳಿ ಮಾಡಲಾಗಿದೆ ಎಂದು ನಮಗೆ ತಿಳಿದಿಲ್ಲ. ನಾವು ಪೊಲೀಸರಿಗೆ ದೂರು ನೀಡಿದ್ದೇವೆ” ಎಂದು ಬಾಲಕಿಯ ಅಣ್ಣ ಹೇಳಿದ್ದಾರೆ.
