ಉದಯವಾಹಿನಿ, ಮಡಿಕೇರಿ: ಕಾಂಗ್ರೆಸ್ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಮುಂದೆ ಮಂಗಳವಾರ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ದಿಕ್ಕಾರದ ಘೋಷಣೆಗಳನ್ನು ಮೊಳಗಿಸಿದರು. ಖಾಲಿ ತಟ್ಟೆ ಹಿಡಿದು ಆಕ್ರೋಶ ವ್ಯಕ್ತಪಡಿಸಿದರು.’ಕೇಂದ್ರ ಸರ್ಕಾರ ಅಕ್ಕಿ ಕೊಡುವುದಿಲ್ಲ ಎಂದು ಹೇಳುವ ಬಡವರ ವಿರೋಧಿ ಧೋರಣೆ ಅನುಸರಿಸುತ್ತಿದೆ’ ಎಂದು ಹರಿಹಾಯ್ದ ಅವರು, ’10 ಕೆ.ಜಿ. ಅಕ್ಕಿಯನ್ನು ಕೊಟ್ಟೇ ಕೊಡುತ್ತೇವೆ’ ಎಂದೂ ಘೋಷಣೆಗಳನ್ನು ಕೂಗಿದರು. ಈ ವೇಳೆ ಮಾತನಾಡಿದ ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಧರ್ಮಜಾ ಉತ್ತಪ್ಪ, ‘ಜುಲೈ 1ರಿಂದ ಪ್ರತಿ ತಿಂಗಳೂ 10 ಕೆ.ಜಿ ಅಕ್ಕಿಯನ್ನು ಉಚಿತವಾಗಿ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಘೋಷಿಸಿತ್ತು. ಇದಕ್ಕೂ ಮುನ್ನ ಕೇಂದ್ರ ಆಹಾರ ನಿಗಮ ಅಕ್ಕಿ ಪೂರೈಸಲು ಒಪ್ಪಿಗೆ ಸೂಚಿಸಿತ್ತು. ಆದರೆ, ಈಗ ಏಕಾಏಕಿ ಅಕ್ಕಿ ಕೊಡುವುದಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದಾರೆ. ಈ ಮೂಲಕ ರಾಜ್ಯ ಸರ್ಕಾರದ ಬಡವರ ಪರವಾದ ಮಹತ್ವಕಾಂಕ್ಷಿ ಯೋಜನೆಯನ್ನು ವಿಫಲಗೊಳಿಸಲು ಕೇಂದ್ರ ಸರ್ಕಾರ ಹುನ್ನಾರ ನಡೆಸಿದೆ’ ಎಂದು ಆರೋಪಿಸಿದರು. ಪ್ರಚಾರ ಸಮಿತಿ ಅಧ್ಯಕ್ಷ ಟಿ.ಪಿ.ರಮೇಶ ಮಾತನಾಡಿ, ‘ಕೇಂದ್ರ ಸರ್ಕಾರ ಅಕ್ಕಿಯ ವಿಷಯದಲ್ಲಿ ದಂದ್ವ ನಿಲುವು ತಳೆದಿದೆ’ ಎಂದು ಆರೋಪಿಸಿದರು. ಕೇಂದ್ರ ಆಹಾರ ನಿಗಮವು ಅಕ್ಕಿಯನ್ನು ಮುಕ್ತ ಮಾರುಕಟ್ಟೆಯಲ್ಲಿ ಮಾರಾಟ ಮಾಡಬೇಕು ಎಂಬ ನೆಪ ಹೂಡಿ ₹ 2,400 ದರವನ್ನು ಪ್ರತಿ ಕ್ವಿಂಟಲ್‌ಗೆ ನಿಗದಿಪಡಿಸಿದೆ. ಆದರೆ, ಮುಕ್ತ ಮಾರುಕಟ್ಟೆಯಲ್ಲಿ ಖರೀದಿಯೇ ನಡೆಯುತ್ತಿಲ್ಲ. ರಾಜ್ಯ ಸರ್ಕಾರ ಹಣ ಕೊಡುತ್ತೇವೆ ಕೊಡಿ ಎಂದರೂ ಕೊಡುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.
