ಉದಯವಾಹಿನಿ, ಬೆಂಗಳೂರು: ಮುಡಾ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆಯಾದ ಜಾರಿ ನಿರ್ದೇಶನಾಲಯಕ್ಕೆ ಭಾರೀ ಹಿನ್ನಡೆಯಾಗಿದ್ದು, ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಾಮೂರ್ತಿಗಳು ಕಠಿಣ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ಮೂಲಕ ಇ.ಡಿ.ಯ ಮೇಲನವಿಯನ್ನು ವಜಾಗೊಳಿಸಿದ್ದಾರೆ. ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯದ ತನಿಖೆಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಜಾರಿ ನಿರ್ದೇಶನಾಲಯ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದಿನ ವಿಚಾರಣೆಯಲ್ಲಿ ಸುಪ್ರೀಂಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರನ್ನೊಳಗೊಂಡ ವಿಭಾಗೀಯ ಪೀಠ ತೀವ್ರ ಸ್ವರೂಪದ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದ್ದು, ಜಾರಿ ನಿರ್ದೇಶನಾಲಯವನ್ನು ತರಾಟೆಗೆ ತೆಗೆದುಕೊಂಡಿದೆ.
ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಬಿ.ಎಂ.ಪಾರ್ವತಿ ಮತ್ತು ನಗರಾಭಿವೃದ್ಧಿ ಸಚಿವ ಭೈರತಿ ಸುರೇಶ್ ಅವರ ವಿರುದ್ಧ ಜಾರಿ ನಿರ್ದೇಶನಾಲಯ ತನಿಖೆ ಆರಂಭಿಸಿ ನೋಟೀಸ್ ನೀಡಿತ್ತು. ಈ ನೋಟೀಸ್ ಅನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ಆದೇಶವನ್ನು ಜಾರಿ ನಿರ್ದೆಶನಾಲಯ ಸುಪ್ರೀಂಕೋರ್ಟ್‌ನಲ್ಲಿ ಪ್ರಶ್ನಿಸಿತ್ತು. ಇಂದಿನ ವಿಚಾರಣೆಯ ಆರಂಭದಲ್ಲೇ ಮುಖ್ಯ ನ್ಯಾಯಮೂರ್ತಿಗಳು ತಮ ಅಭಿಪ್ರಾಯವನ್ನು ವ್ಯಕ್ತಪಡಿಸಿ, ದುರಾದೃಷ್ಟವಶಾತ್ ನನಗೆ ಮಹಾರಾಷ್ಟ್ರದಲ್ಲಿ ಕೆಲ ಅನುಭವಗಳಾಗಿವೆ. ದಯವಿಟ್ಟು ನಮನ್ನು ಬಾಯಿ ತೆರೆಯುವಂತೆ ಒತ್ತಾಯ ಮಾಡಬೇಡಿ. ಇಲ್ಲವಾದರೆ ಜಾರಿ ನಿರ್ದೆಶನಾಲಯದ ವಿರುದ್ಧವಾಗಿ ನಾವು ಕಠಿಣವಾದ ಅಭಿಪ್ರಾಯಗಳನ್ನು ವ್ಯಕ್ತಪಡಿಸಬೇಕಾಗುತ್ತದೆ ಎಂದಿದ್ದಾರೆ.
