ಉದಯವಾಹಿನಿ, ಗಾಂಧೀನಗರ: ಅಹಮದಾಬಾದ್ ವಿಮಾನ ನಿಲ್ದಾಣಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದ್ದು, ಸ್ಥಳದಲ್ಲಿ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಶೋಧಕಾರ್ಯ ನಡೆಸಿದೆ. ಈ ಕುರಿತು ಜಂಟಿ ಪೊಲೀಸ್ ಆಯುಕ್ತ ಶರದ್ ಸಿಂಘಾಲ್ ಅವರು ಮಾಹಿತಿ ನೀಡಿದ್ದು, ಅಹಮದಾಬಾದ್‌ನ ಸರ್ದಾರ್ ವಲ್ಲಭಬಾಯಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಅಪರಾಧ ವಿಭಾಗಕ್ಕೆ ಬಾಂಬ್ ಬೆದರಿಕೆ ಮೇಲ್ ಬಂದಿದೆ. ಮಾಹಿತಿ ಬೆನ್ನಲ್ಲೇ ಪೊಲೀಸರು, ಬಾಂಬ್ ನಿಷ್ಕ್ರಿಯ ದಳ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ದೌಡಾಯಿಸಿದ್ದು, ಶೋಧ ಕಾರ್ಯ ಮುಂದುವರೆಸಿದೆ. ಈವರೆಗೂ ವಿಮಾನ ನಿಲ್ದಾಣದಲ್ಲಿ ಯಾವುದೇ ರೀತಿಯ ಅನುಮಾನಾಸ್ಪದ ವಸ್ತುಗಳು ಪತ್ತೆಯಾಗಿಲ್ಲ.
ಇದಕ್ಕೂ ಮುನ್ನ ಗುಜರಾತ್ ಮುಖ್ಯಮಂತ್ರಿ ಕಚೇರಿ ಹಾಗೂ ಗಾಂಧೀನಗರದಲ್ಲಿರುವ ರಾಜ್ಯ ಸಚಿವಾಲಯಕ್ಕೆ ಹುಸಿ ಬಾಂಬ್ ಬೆದರಿಕೆ ಮೇಲ್ ಬಂದಿತ್ತು. ಕಳೆದ ತಿಂಗಳು ಅಹಮದಾಬಾದ್ ವಿಮಾನ ನಿಲ್ದಾಣದಿಂದ ಹೊರಟ ಏರ್ ಇಂಡಿಯಾ ವಿಮಾನವೊಂದು ಟೇಕ್ ಆಫ್ ಆದ ಕೆಲವೇ ಸೆಕೆಂಡುಗಳಲ್ಲಿ ಪತನಗೊಂಡಿತ್ತು. ಪರಿಣಾಮ 241 ಪ್ರಯಾಣಿಕರು ಸೇರಿ 260ಕ್ಕೂ ಅಧಿಕ ಜನ ಸಾವನ್ನಪ್ಪಿದ್ದರು.
