ಉದಯವಾಹಿನಿ, ಬೆಂಗಳೂರು: ಆರ್‌ಸಿಬಿ ಸಂಭ್ರಮಾಚರಣೆ ವೇಳೆ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರ ವಿರುದ್ಧ ಇಲಾಖಾ ತನಿಖೆಗೆ ಕರ್ನಾಟಕ ಸಚಿವ ಸಂಪುಟ ನಿರ್ಧರಿಸಿದೆ. ಅಷ್ಟೇ ಅಲ್ಲದೆ ಆರ್‌ಸಿಬಿ, ಇವೆಂಟ್ ಮ್ಯಾನೇಜ್ಮೆಂಟ್ ಕಂಪನಿ ಡಿಎನ್ಎ ಹಾಗೂ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (ಕೆಎಸ್‌ಸಿಎ) ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಲು ಕೂಡ ಸಚಿವ ಸಂಪುಟ ತೀರ್ಮಾನಿಸಿದೆ.
ಜೂನ್ 4ರಂದು ಆರ್.ಸಿ.ಬಿ ವಿಜಯೋತ್ಸವದ ಸಂದರ್ಭದಲ್ಲಿ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಉಂಟಾದ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಜಾನ್ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕ ಸದಸ್ಯ ವಿಚಾರಣಾ ಆಯೋಗವನ್ನು ರಚಿಸಲಾಗಿತ್ತು. ಕುನ್ಹಾ ಅವರ ವರದಿಯನ್ನು ರಾಜ್ಯ ಸಚಿವ ಸಂಪುಟ ಒಪ್ಪಿದೆ. ಚರ್ಚೆಯ ನಂತರ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಸಲ್ಲಿಸಿಕೆಯಾದ ವರದಿಯನ್ನು ಅಂಗೀಕರಿಸಲಾಗಿದೆ. ವರದಿಯಲ್ಲಿ ಉಲ್ಲೇಖಿಸಿರುವ ಖಾಸಗಿ ಸಂಸ್ಥೆಗಳ ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಕೈಗೊಳ್ಳಬೇಕಿರುವ ಕ್ರಮಗಳನ್ನು ಕಾನೂನು ರೀತ್ಯಾ ಕ್ರಮ ಕೈಗೊಳ್ಳಲು ಹಾಗೂ ಸರ್ಕಾರಿ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆಯನ್ನು ನಡೆಸಲು ಸಚಿವ ಸಂಪುಟ ನಿರ್ಧರಿಸಿತು.
ಆರ್.ಸಿ.ಬಿ, ಡಿ.ಎನ್.ಎ ಎಂಟರ್‌ಟೈನ್‌ಮೆಂಟ್ ನೆಟ್‌ವರ್ಕ್ಸ್ ಪ್ರೈವೇಟ್ ಲಿಮಿಟೆಡ್, ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್, ಕೆ.ಎಸ್.ಸಿ.ಎ ಅಧ್ಯಕ್ಷ ರಘುರಾಮ್ ಭಟ್, ಕೆಎಸ್‌ಸಿಎ ಮಾಜಿ ಅಧ್ಯಕ್ಷ, ಎ. ಶಂಕರ್, ಕೆಎಸ್‌ಸಿಎ ಮಾಜಿ ಖಜಾಂಚಿ ಜಯರಾಮ್ ಇ.ಎಸ್, ರಾಜೇಶ್ ಮೆನನ್, ಉಪಾಧ್ಯಕ್ಷರು, ಆರ್.ಸಿ.ಬಿ.ಎಸ್.ಪಿ ಎಲ್, ಡಾ: ವೆಂಕಟವರ್ಧನ್, ಎಂ.ಡಿ. ಡಿಎನ್ಎ ಎಂಟರ್ಟೈನ್ಮೆಂಟ್ ನೆಟ್ ವರ್ಕ್ಸ್ ಇವರುಗಳ ಮೇಲೆ ಕ್ರಮ ಜರುಗಿಸಲಾಗುವುದು ಎಂದು ಸರ್ಕಾರ ತಿಳಿಸಿದೆ.
