ಉದಯವಾಹಿನಿ, ಬೆಂಗಳೂರು: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಕಚೇರಿಯಲ್ಲಿ ಬಾಂಬ್ ಸ್ಫೋಟಿಸುವುದಾಗಿ (Bomb Threat) ಅನಾಮಧೇಯ ವ್ಯಕ್ತಿಯಿಂದ ಇ ಮೇಲ್ ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ ನಡೆಸಲಾಗಿದ್ದು, ಯಾವುದೇ ಅನುಮಾನಾಸ್ಪದ ವಸ್ತು ಪತ್ತೆಯಾಗದ ಹಿನ್ನೆಲೆಯಲ್ಲಿ ಇದೊಂದು ಹುಸಿ ಬೆದರಿಕೆ ಸಂದೇಶ ಎನ್ನುವುದು ಗೊತ್ತಾಗಿದೆ. ಈ ಬಗ್ಗೆ ತನಿಖೆ ನಡೆಯುತ್ತಿದೆ.ಅಪರಿಚಿತ ಇ ಮೇಲ್‌ನಿಂದ ಕೆಂಪೇಗೌಡ ವಿಮಾನ ನಿಲ್ದಾಣದ ಟರ್ಮಿನಲ್ ಮ್ಯಾನೇಜರ್ ವಿಳಾಸಕ್ಕೆ ಬೆದರಿಕೆ ಸಂದೇಶ ಬಂದಿತ್ತು. ವಿಮಾನ ನಿಲ್ದಾಣದ 2 ಟರ್ಮಿನಲ್‌ನಲ್ಲಿ ಸ್ಫೋಟಕ ಇಡಲಾಗಿದ್ದು, ಬೆಳಗ್ಗೆ 11 ಗಂಟೆ ಸುಮಾರಿಗೆ ಬ್ಲಾಸ್ಟ್‌ ಆಗಲಿದೆ ಎಂದು ಬೆದರಿಕೆ ಹಾಕಲಾಗಿತ್ತು.ಇದಾಗಿ ಸ್ವಲ್ಪ ಹೊತ್ತಿನ ಬಳಿಕ ಡಿ.ಕೆ. ಶಿವಕುಮಾರ್‌ ಅವರ ಕಚೇರಿಯಲ್ಲಿ ಬಾಂಬ್‌ ಸ್ಫೋಟಿಸುವುದಾಗಿ ಬೆದರಿಕೆ ಹಾಕಲಾಗಿತ್ತು. ಈ ಹಿನ್ನೆಲೆಯಲ್ಲಿ ತೀವ್ರ ತಪಾಸಣೆ ನಡೆಸಲಾಯಿತು. ಬಾಂಬ್‌ ನಿಷ್ಕ್ರಿಯ ದಳದ ಸಿಬ್ಬಂದಿ ಕೂಡಲೇ ಎರಡೂ ಕಡೆಗಳಿಗೆ ಧಾವಿಸಿ ಸಮಗ್ರವಾಗಿ ತಪಾಸಣೆ ನಡೆಸಿದರು. ಕೊನೆಗೆ ಇದೊಂದು ಹುಸಿ ಬಾಂಬ್‌ ಬೆದರಿಕೆ ಎಂದು ತಿಳಿದು ಬಂತು ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ. ಇತ್ತೀಚಿನ ದಿನಗಳಲ್ಲಿ ಬಾಂಬ್‌ ಬೆದರಿಕೆ ಕರೆ ಹೆಚ್ಚುತ್ತಿರುವುದು ಆತಂಕಕ್ಕೆ ಕಾರಣವಾಗಿದೆ.

Leave a Reply

Your email address will not be published. Required fields are marked *

error: Content is protected !!