ಉದಯವಾಹಿನಿ, ಉತ್ತರಾಖಂಡ: ಹರಿದ್ವಾರದ ಮಾನಸ ದೇವಿ ದೇವಸ್ಥಾನದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ(Haridwar Stampede) ಆರು ಜನರು ಸಾವನ್ನಪ್ಪಿದ್ದಾರೆ. ದೇವಸ್ಥಾನಕ್ಕೆ ಹೋಗುವ ಮೆಟ್ಟಿಲುಗಳ ಮೇಲೆ ಕಾಲ್ತುಳಿತ ಸಂಭವಿಸಿದೆ. ಈ ಬಗ್ಗೆ ಗರ್ವಾಲ್ ಜಿಲ್ಲೆಯ ಪೊಲೀಸ್ ಆಯುಕ್ತ ವಿನಯ್ ಶಂಕರ್ ಪಾಂಡೆ ಮಾಹಿತಿ ನೀಡಿದ್ದು, ದೇವಸ್ಥಾನದಲ್ಲಿ ಏಕಾಏಕಿ ಜನದಟ್ಟನೆ ಉಂಟಾಗಿದೆ. ಪರಿಣಾಮವಾಗಿ ಕಾಲ್ತುಳಿತ ಸಂಭವಿಸಿದೆ. ಗಾಯಗೊಂಡ ಭಕ್ತರನ್ನು ಆಂಬ್ಯುಲೆನ್ಸ್‌ಗಳಲ್ಲಿ ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಅವರಿಗೆ ಚಿಕಿತ್ಸೆ ಚಿಕಿತ್ಸೆ ನೀಡಲಾಗುತ್ತಿದೆ.ಪವಿತ್ರವಾದ ಶ್ರಾವಣ ಮಾಸದಲ್ಲಿ ಈ ದುರಂತ ನಡೆದಿದ್ದು, ನಗರದ ಎಲ್ಲಾ ಯಾತ್ರಾ ಸ್ಥಳಗಳಲ್ಲಿ ಭಕ್ತರ ದಂಡೇ ಸೇರುತ್ತದೆ. ಈ ಸಮಯದಲ್ಲಿ ಗಂಗಾ ನದಿಯಿಂದ ನೀರು ಸಂಗ್ರಹಿಸಲು ನಗರಕ್ಕೆ ಭೇಟಿ ನೀಡುವ ಶಿವಭಕ್ತ ಕನ್ವಾರಿಯರಿಗೆ ಹರಿದ್ವಾರವು ಪ್ರಮುಖ ತಾಣವಾಗಿದೆ.
ಇನ್ನು ಘಟನೆ ಬಗ್ಗೆ ಉತ್ತರಾಖಂಡದ ಮುಖ್ಯಮಂತ್ರಿ ಪುಷ್ಕರ್ ಧಾಮಿ ಪ್ರತಿಕ್ರಿಯಿಸಿದ್ದು, ಹರಿದ್ವಾರದ ಮಾನಸ ದೇವಿ ದೇವಸ್ಥಾನಕ್ಕೆ ಹೋಗುವ ಮಾರ್ಗದಲ್ಲಿ ಕಾಲ್ತುಳಿತದ ಸುದ್ದಿ ಕೇಳಿ ತುಂಬಾ ದುಃಖವಾಗಿದೆ. ಸ್ಥಳೀಯ ಪೊಲೀಸರು ಮತ್ತು ಇತರ ರಕ್ಷಣಾ ತಂಡಗಳು ಸ್ಥಳಕ್ಕೆ ತಲುಪಿದ್ದು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಈ ವಿಷಯದ ಬಗ್ಗೆ ನಾನು ಸ್ಥಳೀಯ ಆಡಳಿತದೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ ಮತ್ತು ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸಲಾಗುತ್ತಿದೆ. ಎಲ್ಲಾ ಭಕ್ತರ ಸುರಕ್ಷತೆ ಮತ್ತು ಯೋಗಕ್ಷೇಮಕ್ಕಾಗಿ ನಾನು ಮಾತೃ ದೇವಿಯನ್ನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಮಾನಸ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ ಸಂಭವಿಸಿದ ಬಗ್ಗೆ ಹರಿದ್ವಾರ ಜಿಲ್ಲಾ ಮ್ಯಾಜಿಸ್ಟ್ರೇಟ್ ಮಯೂರ್ ದೀಕ್ಷಿತ್ ಅವರು ಪ್ರತಿಕ್ರಿಯಿಸಿದ್ದು, ಹರಿದ್ವಾರದ ಮಾನಸ ದೇವಿ ದೇವಸ್ಥಾನದ ಕಡೆಗೆ ಪಾದಚಾರಿ ರಸ್ತೆಯಲ್ಲಿ ಕಾಲ್ತುಳಿತ ಸಂಭವಿಸಿದೆ ಇಲ್ಲಿಯವರೆಗೆ ಆರು ಜನರು ಸಾವನ್ನಪ್ಪಿದ್ದಾರೆ ಎಂದು ನಮಗೆ ತಿಳಿಸಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸರಿಯಾದ ತನಿಖೆಯ ನಂತರ ಹೆಚ್ಚಿನ ಮಾಹಿತಿಯನ್ನು ಹಂಚಿಕೊಳ್ಳಲಾಗುವುದು ಎಂದು ಹೇಳಿದ್ದಾರೆ.
