ಉದಯವಾಹಿನಿ, ಮದ್ದೂರು: ನನಗೆ ಕನಕಪುರ ಎಷ್ಟು ಮುಖ್ಯವೋ, ಮಂಡ್ಯದ ಏಳು ಕ್ಷೇತ್ರಗಳು ಅಷ್ಟೇ ಮುಖ್ಯ. ಮದ್ದೂರಿನ ಶಾಸಕ ಉದಯ್ ಅವರ ಬೆನ್ನಿಗೆ ಇಡೀ ಸರ್ಕಾರ ನಿಂತಿದೆ. ಕ್ಷೇತ್ರದ ಜನರ ಋಣ ತೀರಿಸಲು 1146 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಮದ್ದೂರಿನಲ್ಲಿ ಸೋಮವಾರ ನಡೆದ 1146 ಕೋಟಿ ರೂ. ಮೊತ್ತದ ವಿವಿಧ ಇಲಾಖೆಗಳ ಹಲವು ಯೋಜನೆಗಳ ಕಾಮಗಾರಿ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದರು.ನಾವು ಇಂದು ನಿಮ್ಮಿಂದ ಜೈಕಾರ ಹಾಕಿಸಿಕೊಳ್ಳಲು ಬಂದಿಲ್ಲ. ಈ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಉದಯ್ ಅವರನ್ನು ಗೆಲ್ಲಿಸಿ ಜಿಲ್ಲೆಯ 7 ಸ್ಥಾನಗಳ ಪೈಕಿ 6ರಲ್ಲಿ ಕಾಂಗ್ರೆಸ್ ಅನ್ನು ಬೆಂಬಲಿಸಿದ್ದೀರಿ. ಆ ಮೂಲಕ ರಾಜ್ಯದಲ್ಲಿ 136 ಸಂಖ್ಯಾಬಲದ ಬಲಿಷ್ಠ ಸರ್ಕಾರ ರಚನೆಗೆ ಸಹಕಾರ ನೀಡಿರುವ ನಿಮ್ಮ ಋಣ ತೀರಿಸಲು ನಾವಿಲ್ಲಿಗೆ ಬಂದಿದ್ದೇವೆ ಎಂದು ಹೇಳಿದರು.

ನೀರಾವರಿ ಇಲಾಖೆಯ ಕಚೇರಿಯನ್ನು ನಾನು ಆರಂಭಿಸುತ್ತಿದ್ದೇನೆ. ಮಳವಳ್ಳಿವರೆಗೂ ನೀರು ಹರಿಸಿ, ಮದ್ದೂರಿನ ಕಾಲುವೆಗಳ ಅಭಿವೃದ್ಧಿ ದೃಷ್ಟಿಯಿಂದ ಸುಮಾರು 500 ಕೋಟಿಗೂ ಹೆಚ್ಚು ಮೊತ್ತದ ಹಣವನ್ನು ನೀಡಿದ್ದೇವೆ. ಚೆಲುವರಾಯಸ್ವಾಮಿ ಅವರು ಕೂಡ ಸಾಕ್ಷಿಗುಡ್ಡೆ ಬಿಟ್ಟು ಹೋಗಲು, ರೈತರ ಮಕ್ಕಳಿಗಾಗಿ ಕೃಷಿ ವಿವಿ ತರಲು ಮುಂದಾಗಿದ್ದಾರೆ. ಜಿಲ್ಲೆಯ ಏಳೂ ಕ್ಷೇತ್ರಗಳಲ್ಲಿ ವಿವಿಧ ಯೋಜನೆ ಹಮ್ಮಿಕೊಳ್ಳಲಾಗಿದೆ. ಈ ಜಿಲ್ಲೆಯಲ್ಲಿ ಅತಿಹೆಚ್ಚು ಶಾಸಕರು ಗೆದ್ದಾಗ ಕಾಂಗ್ರೆಸ್ ಸರ್ಕಾರ ರಚನೆಯಾಗಿದೆ ಎಂದರು.
ನಾವು ಯೋಗಿ ಎಂದು ಕರೆಸಿಕೊಳ್ಳುವುದಕ್ಕಿಂತ ಉಪಯೋಗಿ ಎಂದು ಕರೆಸಿಕೊಳ್ಳುವುದು ಬಹಳ ಮುಖ್ಯ. ಸ್ಥಳೀಯ ಶಾಸಕ ಉದಯ್ ಅವರು ಕ್ಷೇತ್ರದಲ್ಲಿ ಎಲ್ಲಾ ಇಲಾಖೆ ಕೆಲಸಗಳನ್ನು ಮಾಡುವ ಮೂಲಕ ನಿಮ್ಮ ಸೇವೆ ಮಾಡುತ್ತಿದ್ದಾರೆ. ಹದಿನೈದು ದಿನಗಳ ಹಿಂದೆ ನಾನು ಇಲ್ಲಿನ ತಾಲೂಕು ಕಚೇರಿಗೆ ಬಂದಿದ್ದೆ. ನಮ್ಮ ಶಾಸಕ ಉದಯ್ ಅವರು 2 ಕೋಟಿ ಮೊತ್ತದ ನಿವೇಶನವನ್ನು ಕಾಂಗ್ರೆಸ್ ಕಚೇರಿ ನಿರ್ಮಾಣಕ್ಕೆ ನೀಡಿದ್ದಾರೆ. ಚಿಕ್ಕಮಗಳೂರಿನ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಂಶು, ಇಲ್ಲಿನ ಶಾಸಕರಾದ ಉದಯ್, ಶಿರಗುಪ್ಪ ಶಾಸಕರಾದ ನಾಗರಾಜ್, ಸಚಿವ ಸಂತೋಷ್ ಲಾಡ್, ಗದಗ ಶಾಸಕ ಜಿ.ಎಸ್ ಪಾಟೀಲ್, ಸಚಿವರಾದ ಶರಣಪ್ರಕಾಶ್ ಪಾಟೀಲ್ ಸೇರಿದಂತೆ ರಾಜ್ಯದಲ್ಲಿ ಆರು ಜನ ತಮ್ಮ ಆಸ್ತಿಯನ್ನು ಕಾಂಗ್ರೆಸ್ ಕಚೇರಿಗಾಗಿ ದಾನ ಮಾಡಿದ್ದಾರೆ. ಕಾಂಗ್ರೆಸ್ ಪಕ್ಷದ ಅಧ್ಯಕ್ಷನಾಗಿ ನಿಮ್ಮ ಶಾಸಕ ಉದಯ್ ಅವರಿಗೆ ನಮನ ಅರ್ಪಿಸುತ್ತೇನೆ ಎಂದರು.

Leave a Reply

Your email address will not be published. Required fields are marked *

error: Content is protected !!