ಉದಯವಾಹಿನಿ, ಮಂಗಳೂರು: ಕಳೆದೊಂದು ವಾರದಿಂದ ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದೆ. ಹಲವೆಡೆ ಭೂ ಕುಸಿತ (Landslide) ಸಂಭವಿಸಿದ್ದು, ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ನಂ 75 ರ ಕಡಬ ತಾಲೂಕು ಕೌಕ್ರಾಡಿ ಗ್ರಾಮದ ಮಣ್ಣಗುಂಡಿ ಎಂಬಲ್ಲಿ, ಗುಡ್ಡ ಕುಸಿದಿದ್ದು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಬೆಳಗಿನ ಜಾವ ಸುಮಾರು ನಾಲ್ಕು ಗಂಟೆಗೆ ಸಮಯ ಹೆದ್ದಾರಿಗೆ ಮಣ್ಣು ಬಿದ್ದು ಸಂಪೂರ್ಣ ಹೆದ್ದಾರಿ ಬಂದ್ ಆಗಿದ್ದು, ಇದುವರೆಗೂ ಮಣ್ಣು ತೆರವು ಕಾರ್ಯ ಆರಂಭಗೊಂಡಿಲ್ಲ ಎಂದು ಹೇಳಲಾಗುತ್ತಿದೆ. ಹೆದ್ದಾರಿ ಸಂಪೂರ್ಣ ಬ್ಲಾಕ್‌ ಆಗಿದ್ದು, ಪ್ರಯಾಣಿಕರು ಆಕೋಶವನ್ನು ವ್ಯಕ್ತಪಡಿಸುತ್ತಿದ್ದಾರೆ. ಸದ್ಯ ಇದೀಗ ವಾಹನ ಸಂಚಾರ ಪುನರಾರಂಭಗೊಂಡಿದೆ.

ಚಿಕ್ಕಮಗಳೂರಿನಲ್ಲಿ ಪುಷ್ಯ ಮಳೆಯ ಆರ್ಭಟ ಜೋರಾಗಿದೆ. ಪಶ್ಚಿಮ ಘಟ್ಟಗಳ ಸಾಲಿನ ಮಲೆನಾಡು ಭಾಗದಲ್ಲಿ ಸುರಿಯುತ್ತಿರುವ ಮಳೆಗೆ ಅಪಾಯದ ಮಟ್ಟ ಮೀರಿ ತುಂಗಾ, ಭದ್ರೆ ನದಿಗಳು ಭೋರ್ಗರೆಯುತ್ತಿದ್ದು ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದೆ. ಕಳಸ ಭಾಗದಲ್ಲೂ ಧಾರಾಕಾರವಾಗಿ ಮಳೆ ಸುರಿಯುತ್ತಿದ್ದು ಭದ್ರಾ ನದಿ ಕೂಡ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು,ಒಳಹರಿವು ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿದೆ. ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು, ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆ ಮುಂದುವರೆದಿದ್ದು. ತುಂಗಾ, ಭದ್ರಾ ನದಿಗಳ‌ ಒಳ ಹರಿವಿನಲ್ಲಿ ಭಾರಿ ಏರಿಕೆಯಾಗುತ್ತಿದೆ. ಶೃಂಗೇರಿ ಭಾಗದ ಪಶ್ಚಿಮ ಘಟ್ಟಗಳ ಸಾಲಿನಲ್ಲಿ ಮಳೆಯಾಗಿದ್ದು ತುಂಗಾ ನದಿ ನೀರಿನ ಪ್ರಮಾಣ ಏರಿಕೆಯಾಗಿದೆ. ಶೃಂಗೇರಿ ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಜಲಾವೃತವಾಗಿದ್ದು, ಮಠದ ಪಾರ್ಕಿಂಗ್ ಪ್ರದೇಶವಾದ ಗಾಂಧಿ ಮೈದಾನದಲ್ಲಿ ತುಂಗಾ ನದಿ ನೀರು ನುಗ್ಗುವ ಆತಂಕ ಸೃಷ್ಟಿಯಾಗಿದೆ. ತುಂಗಾ, ಭದ್ರೆ ನದಿಗಳು ಉಕ್ಕಿ ಹರಿಯುತ್ತಿದ್ದು, ಶೃಂಗೇರಿಯಲ್ಲಿ ನೆರೆ ಆತಂಕ ಸೃಷ್ಟಿಯಾಗಿದೆ. ಕರ್ನಾಟಕದಾದ್ಯಂತ ಜುಲೈ 31ರವರೆಗೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದಾರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *

error: Content is protected !!