ಉದಯವಾಹಿನಿ, ನವದೆಹಲಿ: ಕರ್ನಾಟಕದಲ್ಲಿ ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಸಿಲ್ಲ. ಆದ್ದರಿಂದ ಕಾಳಸಂತೆಯಲ್ಲಿರುವ ಹಾಗೂ ದಾಸ್ತಾನುಗಳಲ್ಲಿರುವ ರಸಗೊಬ್ಬರವನ್ನು ರೈತರಿಗೆ ತಲುಪುವಂತೆ ಮಾಡಲು ಕರ್ನಾಟಕ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಬೇಕೆಂದು ಸಂಸದ ಡಾ.ಕೆ.ಸುಧಾಕರ್ ಕೇಂದ್ರ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಕನ್ನಡದಲ್ಲಿ ಮಾತನಾಡಿದ ಅವರು, ಮುಂಗಾರು ಖಾರಿಫ್ ಋತುಮಾನವು ಕೃಷಿಗೆ ನಿರ್ಣಾಯಕ ಅವಧಿಯಾಗಿದೆ. ಈ ಸಮಯದಲ್ಲಿ ರೈತರು ಭತ್ತ, ಜೋಳ, ನೆಲಗಡಲೆ, ಸೋಯಾಬೀನ್, ದ್ವಿದಳ ಧಾನ್ಯಗಳನ್ನು ಬೆಳೆಯುತ್ತಾರೆ. ದುರದೃಷ್ಟವಶಾತ್ ಜಾಗತಿಕ ಮಟ್ಟದಲ್ಲಿ ದೇಶಗಳ ನಡುವೆ ಸಂಘರ್ಷ ನಡೆಯುತ್ತಿದೆ. ಆದರೂ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ 8.13 ಲಕ್ಷ ಟನ್‌ಗಳಷ್ಟು ಯೂರಿಯಾವನ್ನು ಕರ್ನಾಟಕ ರಾಜ್ಯಕ್ಕೆ ಕಳುಹಿಸಿಕೊಟ್ಟಿದೆ.
ಭ್ರಷ್ಟಾಚಾರದಲ್ಲಿ ಮುಳುಗಿರುವ, ಸೊರಗಿ ಹೋಗಿರುವ, ದುರಾಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಅಸಮರ್ಪಕ ಆಡಳಿತದಿಂದಾಗಿ ದಾಸ್ತಾನುಗಳಲ್ಲಿರುವ ರಸಗೊಬ್ಬರವನ್ನು ಸರಿಯಾಗಿ ಹಂಚಿಕೆ ಮಾಡಲು ಸಾಧ್ಯವಾಗಿಲ್ಲ. ಈ ಮೂಲಕ ರಾಜ್ಯ ಸರ್ಕಾರ ರೈತರಿಗೆ ಅನ್ಯಾಯ ಮಾಡಿದೆ ಎಂದು ದೂರಿದ್ದಾರೆ.
