ಉದಯವಾಹಿನಿ, ಬೆಂಗಳೂರು: ಮುಂಬರುವ ಗೌರಿ-ಗಣೇಶ ಹಬ್ಬದ ಸಮಯದಲ್ಲಿ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ)ಯ ಎಲ್ಲಾ 75 ವಲಯ ಕಚೇರಿಗಳಲ್ಲಿ ಏಕಗವಾಕ್ಷಿ ತೆರವು ವ್ಯವಸ್ಥೆಯನ್ನು ಜಾರಿಗೆ ತರಲಾಗುವುದು ಎಂದು ಬಿಬಿಎಂಪಿ ಆಯುಕ್ತ ಮಹೇಶ್ವರ ರಾವ್ ಅವರು ಘೋಷಿಸಿದ್ದಾರೆ.ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ನಗರದ ಟೌನ್‌ಹಾಲ್‌ನಲ್ಲಿ ಶನಿವಾರ ಆಯೋಜಿಸಿದ್ದ ಶಾಂತಿ ಸಭೆ ಉದ್ದೇಶಿಸಿ ಮಹೇಶ್ವರ ರಾವ್ ಅವರು ಮಾತನಾಡಿದರು.
ಬಿಬಿಎಂಪಿ, ಪೊಲೀಸ್, ಬೆಸ್ಕಾಂ ಮತ್ತು ಅಗ್ನಿಶಾಮಕ ಅಧಿಕಾರಿಗಳನ್ನು ಒಳಗೊಂಡ ಸಮಿತಿ ರಚಿಸಿ 75 ಏಕಗವಾಕ್ಷಿ ಕೇಂದ್ರ ತೆರೆದು ಸಾರ್ವಜನಿಕ ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅವಕಾಶ ನೀಡಲಾಗುವುದು. ಏಕಗವಾಕ್ಷಿ ಕೇಂದ್ರ ವಿಳಾಸ, ನೋಡಲ್ ಅಧಿಕಾರಿಗಳ ವಿವ ರವಾದ ಮಾಹಿತಿಯನ್ನು ಶೀಘ್ರದಲ್ಲಿ ಬಿಬಿಎಂಪಿ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುವುದು ಎಂದು ಮಾಹಿತಿ ನೀಡಿದರು.ಪ್ರತಿ ವರ್ಷದಂತೆ ಗಣೇಶ ವಿಸರ್ಜನೆಗೆ ಪ್ರಮುಖ ಕೆರೆ ಮತ್ತು ಕಲ್ಯಾಣಿಗಳಲ್ಲಿ ವ್ಯವಸ್ಥೆ ಮಾಡಲಾಗುವುದು. ಪ್ರಮುಖ ಸ್ಥಳ, ಜಂಕ್ಷನ್ ಮತ್ತು ಅವಶ್ಯಕತೆ ಇರುವ ಕಡೆ ವಾರ್ಡ್‌ವಾರು ತಾತ್ಕಾಲಿಕವಾಗಿ ಸಂಚಾರಿ ವಿಸರ್ಜನಾ ಘಟಕ (ಮೊಬೈಲ್ ಟ್ಯಾಂಕ್) ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
