ಉದಯವಾಹಿನಿ,ಬೆಂಗಳೂರು : ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಕರಾವಳಿಯಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಆದರೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮುಂಗಾರು ದುರ್ಬಲವಾಗಿದ್ದು, ಉತ್ತಮ ಮಳೆಗಾಗಿ ಮತ್ತಷ್ಟು ದಿನ ಕಾಯಬೇಕಾದ ಅನಿವಾರ್ಯತೆ ಇದೆ. ಭಾನುವಾರ ಮತ್ತು ಸೋಮವಾರ ಕಲಬುರಗಿ ಮತ್ತು ಬೀದರ್ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿಯೂ ಮುಂದಿನ ಐದು ದಿನ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.
ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಜೂನ್ 27ರವರೆಗೂ ಭಾರೀ ಮಳೆಯಾಗಲಿದೆ ಎಂಬ ಸೂಚನೆ ನೀಡಿದ್ದು, ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅದೇ ರೀತಿ ಬಳ್ಳಾರಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ವಿಜಯನಗರ, ತುಮಕೂರು ಜಿಲ್ಲೆಗಳಿಗೆ ಗುರುವಾರ, ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಈ ಜಿಲ್ಲೆಗಳ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಅಥವಾ ತುಂತುರು ಮಳೆಯಾಗುವ ಸಾಧ್ಯತೆ ಇದೆ.
