ಉದಯವಾಹಿನಿ, ನಿಡಾಡ್‌: ಶೇಯ್‌ ಹೋಪ್‌ ಶತಕ ಹಾಗೂ ಜೇಡನ್‌ ಸೀಲ್ಸ್‌ ಮಾರಕ ಬೌಲಿಂಗ್‌ ಸಹಾಯದಿಂದ ವೆಸ್ಟ್‌ ಇಂಡೀಸ್‌ ತಂಡ ಮೂರನೇ ಹಾಗೂ ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಪಾಕಿಸ್ತಾನ ತಂಡದ ವಿರುದ್ದ 202 ರನ್‌ಗಳ ಭರ್ಜರಿ ಗೆಲುವು ಪಡೆಯಿತು. ಆ ಮೂಲಕ ಮೂರು ಪಂದ್ಯಗಳ ಏಕದಿನ ಸರಣಿಯನ್ನು ವಿಂಡೀಸ್‌ 2-1 ಅಂತರದಲ್ಲಿ ತನ್ನದಾಗಿಸಿಕೊಂಡಿತು. ಇನ್ನು ಮೂರನೇ ಏಕದಿನ ಪಂದ್ಯದಲ್ಲಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಮೊಹಮ್ಮದ್‌ ರಿಝ್ವಾನ್‌ ಅವರ ನಾಯಕತ್ವದ ಪ್ರವಾಸಿ ಪಾಕಿಸ್ತಾನ ತಂಡ ಏಕದಿನ ಸರಣಿಯನ್ನು ಕಳೆದುಕೊಂಡಿತು.

ಇಲ್ಲಿನ ಬ್ರಿಯಾನ್‌ ಲಾರಾ ಕ್ರೀಡಾಂಗಣದಲ್ಲಿ ನಡೆದಿದ್ದ ಮೂರನೇ ಹಾಗೂ ಏಕದಿನ ಸರಣಿ ನಿರ್ಣಾಯಕ ಪಂದ್ಯದಲ್ಲಿ ಟಾಸ್‌ ಸೋತು ಮೊದಲು ಬ್ಯಾಟ್‌ ಮಾಡುವಂತಾಗಿದ್ದ ವೆಸ್ಟ್‌ ಇಂಡೀಸ್‌ ತಂಡ, ಶೇಯ್‌ ಹೋಪ್‌ (120) ಅವರ ಶತಕದ ಬಲದಿಂದ ತನ್ನ ಪಾಲಿನ 50 ಓವರ್‌ಗಳಿಗೆ 6 ವಿಕೆಟ್‌ಗಳ ನಷ್ಟಕ್ಕೆ 294 ರನ್‌ಗಳನ್ನು ಕಲೆ ಹಾಕಿತು. ಆ ಮೂಲಕ ಎದುರಾಳಿ ಪಾಕಿಸ್ತಾನ ತಂಡಕ್ಕೆ 295 ರನ್‌ಗಳ ಗುರಿಯನ್ನು ನೀಡಿತ್ತು.
ಬಳಿಕ ಗುರಿ ಹಿಂಬಾಲಿಸಿದ ಪಾಕಿಸ್ತಾನ ತಂಡ, ಜೇಡನ್‌ ಸೀಲ್ಸ್‌ (18ಕ್ಕೆ 6) ಅವರ ಮಾರಕ ಬೌಲಿಂಗ್‌ ದಾಳಿಗೆ ನಲುಗಿ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿತು. 29.2 ಓವರ್‌ಗಳಿಗೆ 92 ರನ್‌ಗಳಿಗೆ ಆಲ್‌ಔಟ್‌ ಆಯಿತು. ಆ ಮೂಲಕ ದೊಡ್ಡ ಅಂತರದಲ್ಲಿ ಸೋತು ಮುಖಭಂಗ ಅನುಭವಿಸಿತು. ವಿಂಡೀಸ್‌ ತಂಡದ ಶತಕ ಬಾರಿಸಿದ ಶೇಯ್‌ ಹೋಪ್‌, ಪಂದ್ಯ ಶ್ರೇಷ್ಠ ಪ್ರಶಸ್ತಿಗೆ ಭಾಜನರಾದರು.‌

Leave a Reply

Your email address will not be published. Required fields are marked *

error: Content is protected !!