ಉದಯವಾಹಿನಿ, ಇಸ್ಲಾಮಾಬಾದ್: ಅಮೆರಿಕದ ನೆಲದಲ್ಲಿದ್ದುಕೊಂಡು ಭಾರತಕ್ಕೆ ಅಸಿಮ್ ಮುನಿರ್ ಬೆದರಿಕೆ ಹಾಕಿದ ಬೆನ್ನಲ್ಲೇ ಇದೀಗ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಭಾರತದ ವಿರುದ್ಧ ಕಿಡಿ ಕಾರಿದ್ದಾರೆ. ಶತ್ರು” ತನ್ನ ದೇಶಕ್ಕೆ ಸೇರಿದ “ಒಂದು ಹನಿ ನೀರನ್ನು” ಕಸಿದುಕೊಳ್ಳಲು ಬಿಡುವುದಿಲ್ಲ ಎಂದು ಅವರು ಹೇಳಿದರು. ನೀರಿನ ಹರಿವನ್ನು ತಡೆಯುವ ಯಾವುದೇ ಪ್ರಯತ್ನವನ್ನು ಯುದ್ಧದ ಕೃತ್ಯವೆಂದು ಪರಿಗಣಿಸಲಾಗುತ್ತದೆ ಎಂದು ಪಾಕಿಸ್ತಾನ ಪದೇ ಪದೇ ಹೇಳುತ್ತಿದೆ. ಸಿಂದೂ ನದಿಯ ನೀರನ್ನು ಬಿಡುವಂತೆ ಪಾಕ್ ಪ್ರಧಾನಿ ಭಾರತಕ್ಕೆ ಹೇಳಿದ್ದಾರೆ.
ಸಿಂದೂ ನದಿಯ ಮೇಲೆ ನಮಗೂ ಹಕ್ಕಿದೆ. ನೀವು ಅದನ್ನು ಹಿಡಿದಿಟ್ಟುಕೊಳ್ಳಲು ಸಾಧ್ಯವಿಲ್ಲ. ಪಾಕಿಸ್ತಾನದ ಒಂದು ಹನಿಯನ್ನೂ ಕಸಿದುಕೊಳ್ಳಲು ಸಾಧ್ಯವಿಲ್ಲ ಎಂಬುದನ್ನು ನೆನಪಿನಲ್ಲಿಡಿ” ಎಂದು ಇಸ್ಲಾಮಾಬಾದ್‌ನಲ್ಲಿ ನಡೆದ ಸಮಾರಂಭದಲ್ಲಿ ಶೆಹಬಾಜ್ ಷರೀಫ್ ಹೇಳಿದ್ದಾರೆ. ಭಾರತ ಅಂತಹ ಕೃತ್ಯಕ್ಕೆ ಪ್ರಯತ್ನಿಸಿದರೆ, “ನಿಮಗೆ ಮತ್ತೆ ಪಾಠ ಕಲಿಸಲಾಗುವುದು ಎಂದು ಷರೀಫ್ ಹೇಳಿದ್ದಾರೆ. ಕಳೆದ ವಾರ ಪಾಕಿಸ್ತಾನದ ಸೇನಾ ಮುಖ್ಯಸ್ಥ, ಅಸಿಮ್ ಮುನೀರ್ ಅಮೆರಿಕದ ನೆಲದಿಂದ “ಪರಮಾಣು ಯುದ್ಧ”ದ ಬಗ್ಗೆ ಬಹಿರಂಗವಾಗಿ ಎಚ್ಚರಿಕೆ ನೀಡಿದ್ದರು. ಫ್ಲೋರಿಡಾದ ಟ್ಯಾಂಪಾದಲ್ಲಿ ನಡೆದ ಖಾಸಗಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಭಾರತದೊಂದಿಗಿನ ಮುಂದಿನ ಯುದ್ಧದಲ್ಲಿ ಪಾಕಿಸ್ತಾನಕ್ಕೆ ಅಸ್ತಿತ್ವದ ಬೆದರಿಕೆ ಎದುರಾದರೆ ನಾವು ಅರ್ಧ ಜಗತ್ತನ್ನೇ ನಾಶಪಡಿಸುವುದಾಗಿ ಬೆದರಿಕೆ ಹಾಕಿದ್ದರು. ಪಾಕಿಸ್ತಾನದ ಫೀಲ್ಡ್ ಮಾರ್ಷಲ್ ಅಸಿಮ್ ಮುನೀರ್ ಭಾರತವು ಸಿಂಧೂ ಜಲ ಮಾರ್ಗಗಳಲ್ಲಿ ನಿರ್ಮಿಸುವ ಯಾವುದೇ ಮೂಲಸೌಕರ್ಯವನ್ನು ನಾಶಪಡಿಸುವುದಾಗಿಯೂ ಬೆದರಿಕೆ ಹಾಕಿದ್ದಾರೆ. ನಮ್ಮ ದೇಶದಲ್ಲಿ ಕ್ಷಿಪಣಿಗಳ ಕೊರತೆಯಿಲ್ಲ. ಸಿಂಧೂ ಜಲ ಮಾರ್ಗದಲ್ಲಿ ಭಾರತ ಅಣೆಕಟ್ಟು ನಿರ್ಮಿಸಿದರೆ ಅದು ಪಾಕಿಸ್ತಾನಕ್ಕೆ ನೀರಿನ ಹರಿವನ್ನು ತಡೆಯಬಹುದು.
