ಉದಯವಾಹಿನಿ,ಹುಬ್ಬಳ್ಳಿ: ಕೇಂದ್ರ ಅಕ್ಕಿ ಕೊಡದ ವಿಚಾರವಾಗಿ ಬಿಜೆಪಿ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಕಿಡಿಕಾರಿದ್ದು ಬಿಜೆಪಿಯ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡಿ ಅಧಿಕಾರಕ್ಕೆ ಬಂದಿದ್ದೇವೆ ಎಂದರು. ಭ್ರಷ್ಟಾಚಾರ, ಬೆಲೆ ಏರಿಕೆ ವಿರುದ್ಧ ಹೋರಾಟ ಮಾಡಿ ಕರ್ನಾಟಕದಲ್ಲಿ ನಾವು ಅಧಿಕಾರಕ್ಕೆ ಬಂದಿದ್ದೇವೆ. ಭ್ರಷ್ಟಾಚಾರ ರಹಿತ ಆಡಳಿತ ನೀಡುತ್ತೇವೆ ಎಂದು ರಾಜ್ಯದ ಜನರಿಗೆ ಮನವರಿಕೆ ಮಾಡಿಕೊಟ್ಟು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಸಲೀಂ ಅಹ್ಮದ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಭ್ರಷ್ಟಾಚಾರ ರಹಿತ ಆಡಳಿತ ನೀಡುವುದು ನಮ್ಮ ಪಕ್ಷದ ಸಂಕಲ್ಪವಾಗಿದೆ. ಈ ನಿಟ್ಟಿನಲ್ಲಿ ಚುನಾವಣೆಯ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದ ಐದು ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡುವಲ್ಲಿ ಮುಂದಾಗುತ್ತೇವೆ ಎಂದು ಹೇಳಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ಘೋಷಣೆ ಮಾಡಿರುವ ಗ್ಯಾರಂಟಿಗಳಲ್ಲಿ ಉಚಿತ ಅಕ್ಕಿ ಕೊಡುವ ಯೋಜನೆಗೆ ಕೇಂದ್ರ ಸರ್ಕಾರ ಅಡ್ಡಗಾಲು ಹಾಕುತ್ತಿದ್ದು, ಬಡವರ ಅಕ್ಕಿಯಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ. ಎಲ್ಲಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ತಮಗೆ ಹಿನ್ನಡೆಯಾಗಬಹುದು ಎಂಬ ಭಯದಲ್ಲಿ ರಾಜ್ಯಕ್ಕೆ ಅಕ್ಕಿ ಕೊಡಲು ಹಿಂದೇಟು ಹಾಕುತ್ತಿದೆ. ಜನರಿಗೆ ಅಕ್ಕಿ ವಿತರಣೆಯಲ್ಲಿ ವಿಳಂಬವಾದಲ್ಲಿ ಅದಕ್ಕೆ ನೇರ ಹೊಣೆ ಕೇಂದ್ರ ಸರ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
