ಉದಯವಾಹಿನಿ, ಬೆಂಗಳೂರು: ಮುಂಗಾರು ಮಳೆಯ ಆರ್ಭಟ ಮುಂದುವರೆದಿದೆ. ಮಳೆಯ ಅಬ್ಬರಕ್ಕೆ ಹಳ್ಳಕೊಳ್ಳಗಳು ಭರ್ತಿಯಾಗಿ ಹೊಲಗದ್ದೆಗಳು ಜಲಾವೃತಗೊಂಡು ರಸ್ತೆ ಸಂಪರ್ಕ ಕಡಿತಗೊಂಡಿದೆ. ಮಲೆನಾಡು ಭಾಗದಲ್ಲಿ ಗುಡ್ಡ ಕುಸಿತ ಉಂಟಾಗಿ ಸಂಚಾರಕ್ಕೆ ಅಡಚಣೆಯಾಗಿದೆ. 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಕೊಡಗಿನಲ್ಲಿ ಬಿಟ್ಟೂಬಿಡದೆ ಮಳೆ ಸುರಿಯುತ್ತಿದ್ದು, ನಿರಂತರ ಮಳೆಗೆ ಹಲವು ಅವಾಂತರಗಳು ಸೃಷ್ಟಿಯಾಗಿವೆ. ಬೃಹತ್ ಮರಗಳು, ವಿದ್ಯುತ್ ಕಂಬಗಳು ಧರೆಗುರುಳಿರುವುದರಿಂದ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ರಸ್ತೆ ಸಂಪರ್ಕ ಸಮರ್ಪಕವಾಗಿಲ್ಲದೆ ಜನ ಪರದಾಡುವಂತಾಗಿದೆ. ಹಾಸನದಲ್ಲಿ ವರುಣನ ಅಬ್ಬರ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಕಳೆದ ಮೂರು ದಿನಗಳಿಂದ ನಿರಂತರ ಮಳೆ ಸುರಿಯುತ್ತಿದ್ದು, ಭಾರೀ ಮಳೆಗೆ ರಸ್ತೆಗಳೆಲ್ಲಾ ಜಲಾವೃತಗೊಂಡಿವೆ.
ಹಲವೆಡೆ ಭೂಕುಸಿತ ಉಂಟಾಗಿ ರಸ್ತೆ ಸಂಪರ್ಕ ಕಡಿತಗೊಂಡಿದೆ. ಬಿರುಗಾಳಿ ಸಹಿತ ಮಳೆಯ ಅಬ್ಬರಕ್ಕೆ ಮರಗಳು ನೆಲಕ್ಕುರುಳಿವೆ. ನಿರಂತರ ಮಳೆಗೆ ಜನ ಹೈರಾಣಾಗಿದ್ದು, ಮನೆಯಿಂದ ಹೊರಬರದ ಪರಿಸ್ಥಿತಿ ನಿರ್ಮಾಣವಾಗಿದೆ.ಸಕಲೇಶಪುರ ತಾಲ್ಲೂಕಿನ ಕಡಗರವಳ್ಳಿ ಗ್ರಾಮದಲ್ಲಿ ಗುಡ್ಡ ಕುಸಿತ ಉಂಟಾಗಿ ಬಾಚಿಹಳ್ಳಿ, ಒಳಲಹಳ್ಳಿ, ವಂಗಡಹಳ್ಳಿ ಗ್ರಾಮಗಳಿಗೆ ರಸ್ತೆ ಸಂಪರ್ಕ ಕಡಿತಗೊಂಡಿದೆ.
ಮಳೆ ಮುಂದುವರೆದಿದ್ದು, ಇನ್ನೂ ಹಲವೆಡೆ ಗುಡ್ಡ ಕುಸಿಯುವ ಆತಂಕ ಎದುರಾಗಿದೆ. ಸ್ಥಳಕ್ಕೆ ಉಪವಿಭಾಗಾಧಿಕಾರಿ ರಾಜೇಶ್, ತಹಸೀಲ್ದಾರ್ ಸುಪ್ರಿತಾ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಅತ್ತ ಗಡಿ ಜಿಲ್ಲೆ ಬೀದರ್‌ನಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಸಾವಿರಾರು ಎಕರೆಯಲ್ಲಿ ಬೆಳೆದ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ. ಸಾವಿರಾರು ಎಕರೆಯಲ್ಲಿ ಬೆಳೆದಿದ್ದ ಸೋಯಾ, ಕಬ್ಬು, ಉದ್ದು, ತೊಗರಿ ಸೇರಿದಂತೆ ಹತ್ತಾರು ಬೆಳೆಗಳು ನೀರು ಪಾಲಾಗಿವೆ.ಕಲಬುರಗಿ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದಲೂ ಬಿಟ್ಟೂ ಬಿಡದೆ ಮಳೆ ಸುರಿಯುತ್ತಿದ್ದು, ಬೆಣ್ಣೆತೋರ ಜಲಾಶಯ ಭರ್ತಿಯಾಗಿದೆ. ನದಿಗೆ ಅಪಾರ ಪ್ರಮಾಣದಲ್ಲಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ನದಿ ದಡದ ಜಮೀನುಗಳಲ್ಲಿನ ಬೆಳೆಗಳು ನೀರುಪಾಲಾಗಿವೆ.
