ಉದಯವಾಹಿನಿ, ನವದೆಹಲಿ: ಉಪರಾಷ್ಟ್ರಪತಿ ಹುದ್ದೆಗೆ ಚುನಾವಣೆ ಹಿನ್ನಲೆ ಇಂಡಿಯಾ ಒಕ್ಕೂಟದಿಂದ ಒಮ್ಮತದ ಅಭ್ಯರ್ಥಿಯನ್ನು ಆಯ್ಕೆ ಮಾಡಿದೆ. ಆಂಧ್ರಪ್ರದೇಶ ಮೂಲದ ಸುಪ್ರೀಂಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಸುದರ್ಶನ್ ರೆಡ್ಡಿ ಅವರನ್ನು ಅಭ್ಯರ್ಥಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘೋಷಿಸಿದ್ದಾರೆ.ನಿವೃತ್ತ ನ್ಯಾಯಮೂರ್ತಿ ಬಿ. ಸುದರ್ಶನ ರೆಡ್ಡಿ ಅವರು ಭಾರತದ ಸುಪ್ರೀಂಕೋರ್ಟ್ನ ಮಾಜಿ ನ್ಯಾಯಮೂರ್ತಿಯಾಗಿದ್ದರು ಅವರು 2008 ರಿಂದ 2011ರವರೆಗೆ ಸುಪ್ರೀಂಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಸೇವೆ ಸಲ್ಲಿಸಿದ್ದಾರೆ. ಇದಕ್ಕೂ ಮುಂಚೆ, ಅವರು ಆಂಧ್ರಪ್ರದೇಶ ಹೈಕೋರ್ಟ್ನಲ್ಲಿ ನ್ಯಾಯಾಧೀಶರಾಗಿ ಕಾರ್ಯನಿರ್ವಹಿಸಿದ್ದರು.
ನ್ಯಾಯಮೂರ್ತಿ ರೆಡ್ಡಿ ಅವರು, ತಮ್ಮ ವೃತ್ತಿಜೀವನದಲ್ಲಿ ಹಲವಾರು ಪ್ರಮುಖ ತೀರ್ಪುಗಳನ್ನು ನೀಡಿದ್ದಾರೆ. ವಿಶೇಷವಾಗಿ ಸಾಮಾಜಿಕ ನ್ಯಾಯ, ಮಾನವ ಹಕ್ಕುಗಳು, ಮತ್ತು ಸಂವಿಧಾನಿಕ ವಿಷಯಗಳಿಗೆ ಸಂಬಂಧಿಸಿದ ಆದೇಶ ನೀಡಿದ್ದಾರೆ. ಅವರ ಕಾನೂನು ಜ್ಞಾನ ಮತ್ತು ನ್ಯಾಯಾಂಗದ ಸೇವೆಯಿಂದಾಗಿ ಅವರು ಗುರುತಿಸಿಕೊಂಡಿದ್ದಾರೆ.
