ಉದಯವಾಹಿನಿ, ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ಹೇಳಿದರು.
ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್ ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು.
ಪ್ರಸ್ತುತ 5,601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ ನಿರ್ವಹಿಸುತ್ತಿರುವ ವಿಕಲಚೇತನ ಗ್ರಾಮೀಣ ಹಾಗೂ ನಗರ ಪುನವರ್ಸತಿ ಕಾರ್ಯಕರ್ತರು ಮೈಸೂರಿನ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಪ್ರತಿಭಟನೆ ನಡೆಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ಹೇಳಿದರು.

Leave a Reply

Your email address will not be published. Required fields are marked *

error: Content is protected !!