ಉದಯವಾಹಿನಿ, ನವದೆಹಲಿ: ದೆಹಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ ಸ್ಥಳಾಂತರಿಸಬೇಕೆಂ ತನ್ನದೇ ಸುಪ್ರೀಂ ಕೋರ್ಟ್ ತಿದ್ದುಪಡಿ ತಂದಿದೆ. ಬೀದಿ ನಾಯಿಗಳನ್ನು ಹಿಡಿದು, ಸಂತಾನಹರಣ ಶಸ್ತ್ರಚಿಕಿತ್ಸೆ ಬಳಿಕ ಅವುಗಳನ್ನು ಬಿಡುಗಡೆ ಮಾಡಿ, ಆಕ್ರಮಣಕಾರಿ, ಅನಾರೋಗ್ಯ ಇರುವ ನಾಯಿಗಳನ್ನು ಮಾತ್ರ ಶೆಡ್‌ಗಳಿಗೆ ಸ್ಥಳಾಂತರಿಸುವಂತೆ ಕೋರ್ಟ್ ನಿರ್ದೇಶನ ನೀಡಿದೆ. ಈ ಸಂಬಂಧ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.
ನ್ಯಾ. ವಿಕ್ರಮ್ ನಾಥ್, ನ್ಯಾ. ಸಂದೀಪ್ ಮೆಹ್ತಾ ಮತ್ತು ನ್ಯಾ. ಎನ್.ವಿ ಅಂಜಾರಿಯಾ ನೇತೃತ್ವದ ತ್ರಿಸದಸ್ಯ ಪೀಠವು ಈ ಆದೇಶ ಪ್ರಕಟಿಸಿದ್ದು, ಆಗಸ್ಟ್ 11ರಂದು ಹೊರಡಿಸಿದ್ದ ತೀರ್ಪಿನಲ್ಲಿ ತಿದ್ದುಪಡಿ ಮಾಡಿದೆ. ನ್ಯಾ. ಪಾರ್ದಿವಾಲಾ ಪೀಠದ ಆದೇಶಕ್ಕೆ ಶ್ವಾನಪ್ರಿಯರಿಂದ ಅಸಮಾಧಾನ ವ್ಯಕ್ತವಾದ ಹಿನ್ನೆಲೆ ಪ್ರಕರಣ ವಿಚಾರಣೆಯನ್ನ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಲಾಗಿತ್ತು. ಈ ಮೊದಲು ಬೀದಿ ನಾಯಿಗಳನ್ನು ಶಾಶ್ವತವಾಗಿ ಆಶ್ರಯ ತಾಣಗಳಿಗೆ (ಶೆಡ್) ಸ್ಥಳಾಂತರಿಸಬೇಕು ಎಂದು ಹೇಳಿದ್ದ ಸುಪ್ರೀಂ ಈಗ, ಅನಾರೋಗ್ಯ ಮತ್ತು ಆಕ್ರಮಣಕಾರಿ ಬೀದಿ ನಾಯಿಗಳನ್ನು ಮಾತ್ರ ಆಶ್ರಯ ತಾಣಗಳಲ್ಲಿ ಇರಿಸುವಂತೆ ಸೂಚಿಸಿದೆ. ಉಳಿದ ನಾಯಿಗಳನ್ನು ಹಿಡಿದು, ಸಂತಾನಹರಣ ಚಿಕಿತ್ಸೆ, ಜಂತುಹುಳು ನಿವಾರಣಾ ಲಸಿಕೆ ಹಾಕಿದ ಬಳಿಕ ಅವುಗಳನ್ನು ಹಿಡಿದ ಪ್ರದೇಶದಲ್ಲೇ ಬಿಡುವಂತೆ ತಿಳಿಸಿದೆ.
