ಉದಯವಾಹಿನಿ, ಮಂಡ್ಯ: ಮದ್ದೂರು ಘಟನೆ ನೋಡಿದ್ರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ ಎಂದು ಬಿಜೆಪಿ ರಾಜಾಧ್ಯಕ್ಷ ಬಿವೈ ಬಿಜಯೇಂದ್ರ ಸರ್ಕಾರ ವಿರುದ್ಧ ಕಿಡಿಕಾಡಿದ್ದಾರೆ.ಮದ್ದೂರು ಗಣೇಶ ಮೆರವೆಣಿಗೆ ವೇಳೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಎಕ್ಸ್ ಖಾತೆಯಲ್ಲಿ ಪೋಸ್ಟ್ ಹಂಚಿಕೊಂಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಹಿಂದೂ ಹಬ್ಬಗಳು, ಗಣಪತಿ ಉತ್ಸವ ಹಾಗೂ ಮೆರವಣಿಗೆಗಳನ್ನು ನೆಮ್ಮದಿಯಾಗಿ ಆಚರಿಸಲಾಗದ ಪರಿಸ್ಥಿತಿ ಉಂಟಾಗಿದೆ. ಗಣೇಶ ವಿಸರ್ಜನೆಯ ಮೆರವಣಿಗೆಯ ಸಂದರ್ಭದಲ್ಲಂತೂ ಮತಾಂಧ ಪುಂಡರು ಗುಂಪು ಕಟ್ಟಿಕೊಂಡು ಕಲ್ಲು ತೂರುತ್ತಿದ್ದಾರೆ. ಈ ಪರಿಸ್ಥಿತಿಯನ್ನು ನೋಡುತ್ತಿದ್ದರೆ ರಾಜ್ಯದಲ್ಲಿ `ಮೊಘಲ್ ಪ್ರೇರಣೆಯ’ ಆಡಳಿತ ನಡೆಯುತ್ತಿರುವಂತೆ ಭಾಸವಾಗುತ್ತಿದೆ. ಸರ್ಕಾರದ ಈ ಪಕ್ಷಪಾತ ಹಾಗೂ ಮೃದು ಧೋರಣೆ ರಾಜ್ಯದಲ್ಲಿ ಅರಾಜಕತೆ ಉಂಟಾಗಲು ಕಾರಣವಾಗುತ್ತಿದೆ ಎಂದು ಆಕ್ರೋಶ ಹೊರಹಾಕಿದ್ದಾರೆ.

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಗಣೇಶ ವಿಸರ್ಜನೆ ವೇಳೆ ಕಿಡಿಗೇಡಿಗಳು ಮೆರವಣಿಗೆ ವೇಳೆ ನಿರಂತರ ಕಲ್ಲು ತೂರಿ ಪ್ರಕ್ಷುಬ್ಧ ವಾತಾವರಣ ನಿರ್ಮಿಸಿದ್ದಾರೆ. ಕಲ್ಲು ತೂರಾಟದಲ್ಲಿ ಮಹಿಳೆಯರು ಹಾಗೂ ಪೊಲೀಸರು ತೀವ್ರವಾಗಿ ಗಾಯಗೊಂಡಿದ್ದು, ಅತ್ಯಂತ ಆತಂಕಕಾರಿ. ಇದಕ್ಕೂ ಮುನ್ನ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿಯೂ ಗಣಪತಿ ಮೂರ್ತಿಯನ್ನು ಮಲಿನಗೊಳಿಸಿರುವ ಸುದ್ದಿಯೂ ವರದಿಯಾಗಿದೆ. ಅದಲ್ಲದೇ ಮಂಡ್ಯ, ಧಾರವಾಡ, ಬಾಗಲಕೋಟೆ, ಹುಬ್ಬಳ್ಳಿ ಸೇರಿದಂತೆ ರಾಜ್ಯದ ಅನೇಕ ಭಾಗಗಳಿಂದ ವರದಿಯಾಗುತ್ತಿದೆ. ನಾವು ಇದನ್ನು ಅತ್ಯುಗ್ರವಾಗಿ ಖಂಡಿಸುತ್ತೇವೆ ಎಂದು ಕಿಡಿಕಾರಿದ್ದಾರೆ.

Leave a Reply

Your email address will not be published. Required fields are marked *

error: Content is protected !!