ಉದಯವಾಹಿನಿ, ಬೆಂಗಳೂರು: ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣ ಸಂಬಂಧ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಅಕ್ರಮವಾಗಿ ಆನ್‌ಲೈನ್ ಮತ್ತು ಆಫ್‌ಲೈನ್ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಸಾವಿರಾರು ಕೋಟಿ ಹಣ ಹೂಡಿಕೆ ಮತ್ತು ವರ್ಗಾವಣೆ ಆರೋಪದಲ್ಲಿ ಇಡಿ ಅಧಿಕಾರಿಗಳಿಂದ ಬಂಧನವಾಗಿದ್ದ ಚಿತ್ರದುರ್ಗ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಇಂದು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ವಿಚಾರಣೆ ನಡೆಸಿದ ಕೋರ್ಟ್ ವೀರೇಂದ್ರ ಪಪ್ಪಿಯನ್ನು ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶ ನೀಡಿತು.
ಈ ಹಿಂದೆ ವೀರೇಂದ್ರ ಪಪ್ಪಿಗೆ ಸೇರಿದ ಹಲವು ಕಡೆಗಳಲ್ಲಿ ಇಡಿ ಅಧಿಕಾರಿಗಳು ದಾಳಿ ನಡೆಸಿ ಅಕ್ರಮ ವಹಿವಾಟಿಗೆ ಸಂಬಂಧಿಸಿದ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದಿದ್ದರು. ವೀರೇಂದ್ರ ಪಪ್ಪಿಯನ್ನು ಸಿಕ್ಕಿಂನಲ್ಲಿ ಬಂಧಿಸಿದ್ದ ಇಡಿ ಅಧಿಕಾರಿಗಳು ಕಸ್ಟಡಿಗೆ ಪಡೆದು ತೀವ್ರ ವಿಚಾರಣೆ ನಡೆಸಿದ್ದರು. ವಿಚಾರಣೆ ವೇಳೆ ಸಿಕ್ಕ ಹಲವು ಮಾಹಿತಿ ಆಧಾರದ ಮೇಲೆ ಮತ್ತೆ ಎರಡು ಬಾರಿ ದಾಳಿ ನಡೆಸಿ ಪರಿಶೀಲನೆ ನಡೆಸಿತ್ತು. ಈ ವೇಳೆ ಬೆಟ್ಟಿಂಗ್ ಆ್ಯಪ್‌ಗಳಲ್ಲಿ ಹಣ ಹೂಡಿಕೆ ಮತ್ತು ವರ್ಗಾವಣೆ ಮಾಡಿದ್ದ ಬಗ್ಗೆ ದಾಖಲೆಗಳು ಲಭ್ಯವಾಗಿತ್ತು. ಇಡಿ ಅಧಿಕಾರಿಗಳ ತನಿಖೆಯಲ್ಲಿ ವೀರೇಂದ್ರ ಪಪ್ಪಿ ಸುಮಾರು ಏಳು ಸಾವಿರ ಕೋಟಿ ಅಕ್ರಮ ವ್ಯವಹಾರ ನಡೆಸಿರೋ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. ಮುಂದುವರೆದು ಸುಮಾರು ಇಪ್ಪತ್ತು ಸಾವಿರ ಕೋಟಿ ಅಕ್ರಮ ವ್ಯವಹಾರದ ಬಗ್ಗೆ ತನಿಖೆ ನಡೆದಿದೆ ಎನ್ನಲಾಗಿದೆ.
