ಉದಯವಾಹಿನಿ, ಬೆಂಗಳೂರು: ಕಾಂಗ್ರೆಸ್ ಸರಕಾರವು ಕಾಸಿಗಾಗಿ ಪೋಸ್ಟಿಂಗ್ ದಂಧೆಯಲ್ಲಿ ತೊಡಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗಂಭೀರ ಆರೋಪ ಮಾಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಒಂದೇ ಹುದ್ದೆಗೆ ನಾಲ್ವರಿಗೆ ಶಿಫಾರಸು ಪತ್ರಗಳನ್ನು ನೀಡಿರುವ ಬಗ್ಗೆ ಮಾಧ್ಯಮಗಳಲ್ಲಿ ಬಂದ ವರದಿ ಉಲ್ಲೇಖಿಸಿ ಸರಣಿ ಟ್ವೀಟ್ ಮಾಡಿ ಸರಕಾರಕ್ಕೆ ಚಾಟಿ ಬೀಸಿದ್ದಾರೆ. ಪಂಚಗ್ಯಾರಂಟಿಗಳ ರಾಜ್ಯ ಕಾಂಗ್ರೆಸ್ ಸರಕಾರ, ಈಗ 6ನೇ ಗ್ಯಾರಂಟಿಯನ್ನೂ ಖಾತ್ರಿಗೊಳಿಸಿದೆ. ಅದು; ʼಕಾಸಿಗಾಗಿ ಪೋಸ್ಟಿಂಗ್ʼ ಅಧಿಕಾರಕ್ಕೆ ಬಂದು ತಿಂಗಳು ಮುಗಿಯುತ್ತಿದ್ದಂತೆಯೇ ವರ್ಗಾವಣೆ ದಂಧೆಯ ಕೊಚ್ಚೆಯಲ್ಲಿ ಈ ಸರಕಾರ ಎಗ್ಗಿಲ್ಲದೆ ಉರುಳಾಡುತ್ತಿದೆ ಎನ್ನುವುದಕ್ಕೆ ಈ ವರದಿಯೇ ಸಾಕ್ಷಿ ಎಂದಿರುವ ಅವರು ಕಾಸಿಗಾಗಿ ಪೋಸ್ಟಿಂಗ್ ಎಂದು ಹ್ಯಾಷ್ ಟ್ಯಾಗ್ ಮಾಡಿದ್ದಾರೆ.
