ಉದಯವಾಹಿನಿ, ಬೆಂಗಳೂರು: ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ವಿಶೇಷ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ.ಪಾಟೀಲ್ ತಿಳಿಸಿದರು. ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆಯ ನಂತರ ಮಾಧ್ಯಮಗಳಿಗೆ ಅವರು ಮಾಹಿತಿ ನೀಡಿದರು.
ಬೀದರ್, ಕಲಬುರಗಿ, ರಾಯಚೂರು, ಬಳ್ಳಾರಿ, ವಿಜಯನಗರ, ಯಾದಗಿರಿ ಸೇರಿದಂತೆ ಏಳು ಜಿಲ್ಲೆಗಳೂ ಒಳಗೊಂಡಂತೆ ಪ್ರತ್ಯೇಕ ಸಚಿವಾಲಯ ಸ್ಥಾಪಿಸಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಭೂಸ್ವಾಧೀನ, ಪುನಶ್ಚೇತನ ಹಾಗೂ ಪರಿಹಾರ ಪ್ರಾಧಿಕಾರ: ಇದೇ ವೇಳೆ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಭೂಸ್ವಾಧೀನ ಪ್ರಕ್ರಿಯೆ ತ್ವರಿತಗೊಳಿಸಲು ಇಂದು ಕರೆಯಲಾಗಿದ್ದ ವಿಶೇಷ ಸಚಿವ ಸಂಪುಟ ಸಭೆ ನಡೆದ ಬಳಿಕ ಸುದ್ದಿಗೋಷ್ಠಿಯಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಮಾತನಾಡಿದರು.
ಪುನಶ್ಚೇತನ ಕಾರ್ಯಕ್ಕೆ ಸಂಬಂಧಿಸಿದಂತೆ ಪ್ರಮುಖ ಪ್ರಕರಣಗಳಿರುವ ಕಾರಣ, ನಾವು ಈ ವಿಚಾರದಲ್ಲಿ ಹೊಸ ನೀತಿ ರೂಪಿಸಲು ತೀರ್ಮಾನಿಸಿದ್ದೇವೆ. ಈ ವಿಚಾರವಾಗಿ ಸ್ಥಳೀಯ ನಾಯಕರು, ರೈತರ ಅಭಿಪ್ರಾಯ ಪಡೆಯಲಾಗುವುದು. ನ್ಯಾಯಯುತ ಪರಿಹಾರ, ಭೂಸ್ವಾಧೀನ ಪಾರದರ್ಶಕತೆ ಹಕ್ಕು ಕಾಯ್ದೆಯ ಸೆಕ್ಷನ್ 51ರ ಅಡಿಯಲ್ಲಿ ಭೂಸ್ವಾಧೀನ, ಪುನಶ್ಚೇತನ ಹಾಗೂ ಪರಿಹಾರ ಪ್ರಾಧಿಕಾರ ರಚಿಸಲು ಅವಕಾಶವಿದೆ. ಹೀಗಾಗಿ ರಾಜ್ಯ ಸರ್ಕಾರ ಮೊದಲ ಬಾರಿಗೆ ಈ ಪ್ರಾಧಿಕಾರವನ್ನು ರಚಿಸಲಿದೆ. ಮುಖ್ಯನ್ಯಾಯಮೂರ್ತಿಗಳು ನೇಮಕ ಮಾಡುವ ನ್ಯಾಯಾಧೀಶರ ನೇತೃತ್ವದಲ್ಲಿ ಈ ಪ್ರಾಧಿಕಾರವನ್ನು ರಚಿಸಲಾಗುವುದು ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ 3ನೇ ಹಂತದ ಯೋಜನೆ ಜಾರಿಗೆ ಸಂಬಂಧಿಸಿದಂತೆ ಇಂದು ಕಾಂಗ್ರೆಸ್ ನೇತೃತ್ವದ ರಾಜ್ಯ ಸರ್ಕಾರ ನೀರಾವರಿ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕರ್ನಾಟಕದ ಇತಿಹಾಸದಲ್ಲೇ ಮಹತ್ತರ ತೀರ್ಮಾನ ಕೈಗೊಂಡಿದೆ. 30-12-2020ರಲ್ಲಿ ಕೃಷ್ಣಾ ನೀರು ವಿವಾದ ನ್ಯಾಯಾಧೀಕರಣದಲ್ಲಿ ಕರ್ನಾಟಕ ರಾಜ್ಯಕ್ಕೆ ತನ್ನ ಪಾಲಿನ ನೀರು ಹಂಚಿಕೆಯಾಗಿದ್ದು, ಇದರ ಅಂತಿಮ ವರದಿ 29-11-2013ರಲ್ಲಿ ನೀಡಲಾಗಿತ್ತು.

Leave a Reply

Your email address will not be published. Required fields are marked *

error: Content is protected !!