ಉದಯವಾಹಿನಿ, ಕಲಬುರಗಿ: ಕಲ್ಯಾಣ ಕರ್ನಾಟಕ ಉತ್ಸವದ ದಿನದಂದೇ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕವಾಗಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಇಲಾಖೆ ಸೃಜಿಸಿ ಆದೇಶ ಹೊರಡಿಸಿದೆ.
ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಗಾಗಿ ಪ್ರತ್ಯೇಕ ಇಲಾಖೆಯನ್ನು ಸೃಜಿಸಿ ಆದೇಶಿಸಿದಲ್ಲದೆ ಇಲಾಖೆಯು ಯೋಜನೆ ಮತ್ತು ಸಾಂಖ್ಯಿಕ ಸಚಿವರ ಅಧೀನದಲ್ಲಿ ಕಾರ್ಯನಿರ್ವಹಿಸಬೇಕು. ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯ ಕಾರ್ಯದರ್ಶಿಯವರು ಈ ನೂತನ ಇಲಾಖೆಯ ಕಾರ್ಯದರ್ಶಿಯಾಗಿ ಮತ್ತು ಮಂಡಳಿಯ ಎಲ್ಲಾ ಅಧಿಕಾರಿ ಸಿಬ್ಬಂದಿಗಳನ್ನೊಳಗೊಂಡ ಇಲಾಖೆಯು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮತ್ತು ಅನುಚ್ಛೇಧ 371(ಜೆ)ಗೆ ಸಂಬಂಧಿಸಿದ ವಿಷಯಗಳನ್ನು ನಿರ್ವಹಿಸಬೇಕೆಂದು ಆದೇಶಿಸಲಾಗಿದೆ. ಪ್ರದೇಶದಲ್ಲಿನ ಕಾಮಗಾರಿಗಳನ್ನು ಅನುಷ್ಠಾನಗೊಳಿಸುವಲ್ಲಿ ಸಿಬ್ಬಂದಿಗಳ ಕೊರತೆ ಇರುವ ಕಾರಣ ಸದರಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ ಹಾಗೂ ಆ ಪ್ರದೇಶ 7 ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಹೆಚ್ಚುವರಿ ಹುದ್ದೆಗಳನ್ನು ಮಂಜೂರು ಮಾಡಿ ಬಲಪಡಿಸಲು ಸಹ ನಿರ್ಧರಿಸಿದೆ.
ಕಳೆದ ವರ್ಷ ಕಲಬುರಗಿಯಲ್ಲಿ ಸೆ.17 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿಗಾಗಿ ಕೆಲಸಗಳನ್ನು ಇನ್ನೂ ಹೆಚ್ಚಿನ ಪರಿಣಾಮಕಾರಿಯಾಗಿ ಜಾರಿಗೊಳಿಸಲು ಮತ್ತು ಅಭಿವೃದ್ಧಿ ಕಾಮಗಾರಿಗಳ ಮೇಲುಸ್ತುವಾರಿ ಮಾಡಲು ಒಂದು ಪ್ರತ್ಯೇಕ ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಸಚಿವಾಲಯವನ್ನು ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ.

Leave a Reply

Your email address will not be published. Required fields are marked *

error: Content is protected !!