ಉದಯವಾಹಿನಿ, ವಿಜಯಪುರ: ಏರ್‌ಬಸ್-320 ಮಾದರಿಯ ದೊಡ್ಡ ವಿಮಾನಗಳ ಕಾರ್ಯಾಚರಣೆ ಮತ್ತು ರಾತ್ರಿ ವೇಳೆ ಲ್ಯಾಂಡಿಂಗ್ ಸೌಲಭ್ಯ ಅಭಿವೃದ್ಧಿ ಸೇರಿದಂತೆ ಇತರ ಅನುಕೂಲಗಳಿಗಾಗಿ ವಿಜಯಪುರ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿಗಳಿಗೆ ಹೆಚ್ಚುವರಿಯಾಗಿ 270.83 ಕೋಟಿ ರೂ. ಒದಗಿಸಲು ಸಚಿವ ಸಂಪುಟ ಒಪ್ಪಿಗೆ ನೀಡಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಮತ್ತು ವಿಜಯಪುರ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ.
ಸಂಪುಟ ಸಭೆಯಲ್ಲಿ ಈ ಬಗ್ಗೆ ವಿಸ್ತೃತವಾಗಿ ಚರ್ಚಿಸಿ, ಒಪ್ಪಿಗೆ ನೀಡಲಾಗಿದೆ. ಇದರಿಂದಾಗಿ ವಿಜಯಪುರ ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿನ ಒಟ್ಟು ವೆಚ್ಚವು 618.75 ಕೋಟಿ ರೂ.ಗಳಾಗಲಿದೆ. ಎಟಿಆರ್ ಮಾದರಿಯ ನಾಗರಿಕ ವಿಮಾನ ಕಾರ್ಯಾಚರಣೆಗೆ ಸೀಮಿತವಾಗಿದ್ದ ವಿಮಾನ ನಿಲ್ದಾಣದ ಮೂಲ ವಿನ್ಯಾಸವನ್ನು ಏರ್‌ಬಸ್-320 ಮಾದರಿಯ ವಿಮಾನಗಳ ಕಾರ್ಯಾಚರಣೆಗೂ ಅನುಕೂಲವಾಗುವಂತೆ ಬದಲಿಸಿದ್ದರಿಂದ ವೆಚ್ಚ ಹೆಚ್ಚಾಗುತ್ತಿದೆ ಎಂದು ತಿಳಿಸಿದ್ದಾರೆ.
ವಿಮಾನ ನಿಲ್ದಾಣದ ಮೂಲವಿನ್ಯಾಸವನ್ನು ಚಿಕ್ಕ ವಿಮಾನಗಳನ್ನು ಗಮನದಲ್ಲಿಟ್ಟಿಕೊಂಡು ಮಾತ್ರ ಮಾಡಲಾಗಿತ್ತು. ಅದರಲ್ಲಿ ಏರ್‌ಬಸ್ ಮಾದರಿಯ ವಿಮಾನ ಕಾರ್ಯಾಚರಣೆಗಳಿಗಾಗಲಿ, ನೈಟ್ ಲ್ಯಾಂಡಿಂಗ್‌ಗಾಗಲಿ ಅವಕಾಶವಿರಲಿಲ್ಲ. ಆದರೆ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ಉತ್ತರ ಕರ್ನಾಟಕದ ನಗರಗಳು ಕ್ಷಿಪ್ರವಾಗಿ ಬೆಳೆಯುತ್ತಿವೆ. ಜೊತೆಗೆ ಮಹಾರಾಷ್ಟ್ರದ ಸೊಲ್ಲಾಪುರ, ಸಾತಾರಾ ಜಿಲ್ಲೆಗಳೂ ವಿಜಯಪುರಕ್ಕೆ ಹತ್ತಿರವಾಗಿವೆ. ಇತ್ತ ಬೆಳಗಾವಿ, ಕಲಬುರಗಿ ಜಿಲ್ಲೆಯ ಹಲವು ತಾಲೂಕುಗಳ ಒಡನಾಟವೂ ವಿಜಯಪುರದೊಂದಿಗೆ ಹೆಚ್ಚಾಗಿದೆ. ಹೀಗಾಗಿ ಮುಂದಿನ ಐವತ್ತು ವರ್ಷಗಳ ಅಗತ್ಯವನ್ನು ಪರಿಗಣಿಸಿ, ಹಲವು ಹೆಚ್ಚುವರಿ ಸೌಲಭ್ಯಗಳನ್ನು ಈಗ ಸೇರಿಸಲಾಗುತ್ತಿದೆ ಎಂದಿದ್ದಾರೆ.
