ಉದಯವಾಹಿನಿ, ಬೆಂಗಳೂರು: ಬೆಳಗಾವಿಯಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದೆ ಎಂದು ಟಿಟಿಡಿ ಸದಸ್ಯ ಎಸ್.ನರೇಶ್‌ಕುಮಾರ್ ಎಂದು ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೆಳಗಾವಿಯ ಕೋಳಿಕೊಪ್ಪದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ ಅನುಮೋದನೆ ನೀಡಿದ್ದು, ಈ ಮೂಲಕ ಉತ್ತರ ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ಉದ್ದೇಶ ಹೊಂದಿದೆ. ಇನ್ನೂ ಇದೇ ಸೆಪ್ಟೆಂಬರ್ 24ರಿಂದ ಅಕ್ಟೋಬರ್ 2ರವರೆಗೆ ತಿರುಮಲ ವಾರ್ಷಿಕ ಬ್ರಹ್ಮೋತ್ಸವ ನಡೆಯಲಿದ್ದು, ಸಕಲ ಸಿದ್ಧತೆ ನಡೆಯುತ್ತಿದೆ. ಕಳೆದ ಬಾರಿ ತಿರುಪತಿಯಲ್ಲಿ ಕಾಲ್ತುಳಿತ ಸಂಭವಿಸಿತ್ತು. ಹೀಗಾಗಿ ಈ ಬಾರಿ ಎಚ್ಚರ ವಹಿಸಲು ಸೂಚಿಸಲಾಗಿದೆ. ಬ್ರಹ್ಮೋತ್ಸವದ ಸಮಯದಲ್ಲಿ ವಿಶೇಷ ಗಮನಹರಿಸಲಿದ್ದು, ತಿರುಮಲದ ಪಾವಿತ್ರ‍್ಯತೆಯನ್ನು ಕಾಪಾಡುವುದು ಮತ್ತು ಸಾಮಾನ್ಯ ಭಕ್ತರಿಗೆ ಸುಲಭ ದರ್ಶನ ಸಿಗುವಂತೆ ಅವಕಾಶ ಮಾಡಿಕೊಡುತ್ತೇವೆ ಎಂದಿದ್ದಾರೆ.
ಸೆ. 28ರಂದು ಭಾನುವಾರ ಪ್ರಮುಖ ದಿನವಾಗಿದ್ದು, ಅಂದು ಅದ್ದೂರಿಯಾಗಿ ನಡೆಯುವ ಗರುಡ ಸೇವೆ ಭಕ್ತರ ಪ್ರಮುಖ ಆಕರ್ಷಣೆಯಾಗಿದೆ. ಈ ಸಂದರ್ಭದಲ್ಲಿ ಲಕ್ಷಾಂತರ ಭಕ್ತರು ದೇವರ ದರ್ಶನಕ್ಕೆ ಆಗಮಿಸಲಿದ್ದಾರೆ. ಹೀಗಾಗಿ ಬ್ರಹ್ಮೋತ್ಸವವನ್ನು ಸುಗಮವಾಗಿ ನಡೆಸಲು ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ. ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಟಿಟಿಡಿಯ ಎಲ್ಲಾ ಇಲಾಖೆಗಳು ಸೂಕ್ಷ್ಮ ಮಟ್ಟದ ಯೋಜನೆಗಳನ್ನು ಸಿದ್ಧಪಡಿಸಿವೆ. ಭಕ್ತರಿಗೆ ಯಾವುದೇ ಅನಾನುಕೂಲತೆ ಉಂಟಾಗದಂತೆ ನೋಡಿಕೊಳ್ಳಲು ಈ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇನ್ನೂ ಕಲ್ಯಾಣ ಕಟ್ಟೆಗೆ ಹೆಚ್ಚುವರಿಯಾಗಿ 1,500 ಜನರನ್ನು ನೇಮಿಸಲಾಗಿದೆ ಎಂದು ತಿಳಿಸಿದ್ದಾರೆ.
