ಉದಯವಾಹಿನಿ, ಅಹಮದಾಬಾದ್‌ನಲ್ಲಿ ನಡೆದ ಏರ್ ಇಂಡಿಯಾ ವಿಮಾನ (Air India Crash) ಅಪಘಾತದ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕೆಂದು ಕೋರಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವುದಾಗಿ ಹೇಳಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಸಲ್ಲಿಸಿದ ಪ್ರಾಥಮಿಕ ವರದಿಯ ಕೆಲವು ಅಂಶಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದು, ಅವರನ್ನು “ಬೇಜವಾಬ್ದಾರಿ” ಎಂದು ಕರೆದಿದೆ. ದುರಂತದ ಬಗ್ಗೆ ಸ್ವತಂತ್ರ, ನ್ಯಾಯಯುತ ಮತ್ತು ಕಾಲಮಿತಿಯ ತನಿಖೆ ನಡೆಸುವಂತೆ ಕೋರಿ ಸಲ್ಲಿಸಲಾದ ಅರ್ಜಿಯ ಮೇರೆಗೆ ನ್ಯಾಯಾಲಯವು ಕೇಂದ್ರ ಮತ್ತು ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ)ಗೆ ನೋಟಿಸ್ ಜಾರಿ ಮಾಡಿದೆ.
ಅಹಮದಾಬಾದ್‌ನಿಂದ ಲಂಡನ್ ಗ್ಯಾಟ್ವಿಕ್‌ಗೆ ಹಾರುತ್ತಿದ್ದ ಏರ್ ಇಂಡಿಯಾ ವಿಮಾನ AI171 ಜೂನ್ 12 ರಂದು ಟೇಕ್ ಆಫ್ ಆದ ಸ್ವಲ್ಪ ಸಮಯದ ನಂತರ ಅಪಘಾತಕ್ಕೀಡಾಗಿದ್ದು, ಒಟ್ಟು 265 ಜನರು ಸಾವನ್ನಪ್ಪಿದ್ದರು. ಈ ಘಟನೆಯಲ್ಲಿ ಕೇವಲ ಪೈಲಟ್​​ನದ್ದೇ ತಪ್ಪು ಎಂಬುದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಪೀಠ ಅಭಿಪ್ರಾಯಪಟ್ಟಿದೆ. ನಾಗರಿಕ ವಿಮಾನಯಾನ ಸಚಿವಾಲಯ, ನಾಗರಿಕ ವಿಮಾನಯಾನ ನಿರ್ದೇಶನಾಲಯ (ಡಿಜಿಸಿಎ) ಮತ್ತು ವಿಮಾನ ಅಪಘಾತ ತನಿಖಾ ಬ್ಯೂರೋದಿಂದ ನ್ಯಾಯಾಲಯವು ಪ್ರತಿಕ್ರಿಯೆಗಳನ್ನು ಕೋರಿದೆ. ಸ್ವತಂತ್ರ, ನಿಷ್ಪಕ್ಷಪಾತ ಮತ್ತು ತ್ವರಿತ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಮಾತ್ರ ನೋಟಿಸ್ ನೀಡಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟಪಡಿಸಿದೆ. ಅರ್ಜಿದಾರರ ಪರ ವಾದ ಮಂಡಿಸಿದ ಹಿರಿಯ ವಕೀಲ ಪ್ರಶಾಂತ್ ಭೂಷಣ್, ಅಪಘಾತ ನಡೆದು 100 ದಿನಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ಪ್ರಾಥಮಿಕ ವರದಿ ಮಾತ್ರ ಬಿಡುಗಡೆಯಾಗಿದೆ ಎಂದು ಹೇಳಿದರು.

Leave a Reply

Your email address will not be published. Required fields are marked *

error: Content is protected !!