ಉದಯವಾಹಿನಿ, ಮಂಡ್ಯ: ಸೆ.26ರಿಂದ ಕೆಆರ್‌ಎಸ್‌ನಲ್ಲಿ ಕನ್ನಡ ನಾಡಿನ ಜೀವನದಿ “ಕಾವೇರಿ ಆರತಿ” ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. ಸೆ.26ರ ಸಾಯಂಕಾಲ 5 ಗಂಟೆಗೆ ಮಾನ್ಯ ಉಪಮುಖ್ಯಮಂತ್ರಿಗಳು ಹಾಗೂ ಜಲ ಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ “ಕಾವೇರಿ ಆರತಿ” ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಮಾಧ್ಯಮ ಹೇಳಿಕೆ ನೀಡಿರುವ ಅವರು, ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ವೀರ ಸಿಂಹಾಸನ ಮಹಾ ಸಂಸ್ಥಾನ ಮಠಾಧ್ಯಕ್ಷರಾದ ಶ್ರೀ ಡಾ. ಶಿವರಾತ್ರಿ ದೇಶಿಕೇಂದ್ರ ಮಹಾ ಸ್ವಾಮೀಜಿ, ಸಿದ್ಧಗಂಗಾ ಮಠದ ಅಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ನಿಶ್ಚಲಾನಂದನಾಥ ಸ್ವಾಮೀಜಿಗಳು ಭಾಗವಹಿಸಲಿದ್ದಾರೆ ಎಂದಿದ್ದಾರೆ. ಈ ಬಾರಿಯ ದಸರಾದಲ್ಲಿ ಸಾಂಕೇತಿಕವಾಗಿ 5 ದಿನಗಳ ಕಾಲ ಕೆಆರ್‌ಎಸ್‌ನಲ್ಲಿ ಕಾವೇರಿ ತಾಯಿಗೆ ಆರತಿ ಮಾಡಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಮಳೆ, ಬೆಳೆ ಒಳ್ಳೆಯದಾಗಲಿ, ರಾಜ್ಯಕ್ಕೆ ಸನ್ಮಂಗಳವಾಗಲಿ ಎಂದು ತಾಯಿ ಕಾವೇರಿಯಲ್ಲಿ ಪೂಜೆ ಮಾಡಿ ಪ್ರಾರ್ಥಿಸಲಾಗುವುದು ಎಂದು ವಿವರಿಸಿದ್ದಾರೆ.
ಕಾವೇರಿ ಆರತಿಯ ವಿಧಿ ವಿಧಾನಗಳು:
* 13 ಜನರಿಂದ ಆರತಿ. ಅವರಿಗೆ ತಲಾ ಇಬ್ಬರು ಸಹಾಯಕರು ಸೇರಿ ಒಟ್ಟು 40 ಜನರ ತಂಡ ಪೂಜೆಯಲ್ಲಿ ಭಾಗಿ.
* ಮೊದಲು “ವಾತಾಪಿ ಗಣಪತಿಂ ಭಜೆ” ಮಂಗಳವಾದ್ಯದಿಂದ ಪೂಜೆ ಪ್ರಾರಂಭ.
* ಕಾವೇರಿ ಪ್ರಾರ್ಥನೆ, ಗಣಪತಿ ಪ್ರಾರ್ಥನೆ, ಗುರು ಪ್ರಾರ್ಥನೆ, ಸಂಕಲ್ಪ.
* ಕಾವೇರಿ ಸ್ತ್ರೋತ್ರದ ಮೂಲಕ ತೀರ್ಥಕ್ಕೆ ಪೂಜೆ, ಬಾಗಿನ ಅರ್ಪಣೆ.
* ಬ್ರಹ್ಮ, ವಿಷ್ಣು, ಮಹೇಶ್ವರರ ಪ್ರಾರ್ಥನೆ, ಚಾಮರ ಸೇವೆ.
* ಮೂರು ದಿಕ್ಕಿಗೂ ಶಂಖನಾದ, ದೂಪದ ಆರತಿ ಹಾಗೂ ಮಂತ್ರ ಪುಷ್ಪ ಪಠಣ
* ಕೊನೆಯಲ್ಲಿ ಕುಂಭಾರತಿ, ನಾಗಾರತಿ, ಕಾವೇರಿ ಆರತಿಯೊಂದಿಗೆ ಪೂಜಾ ಕೈಂಕರ್ಯ ಸಂಪನ್ನ.ಇದನ್ನೂ ಓದಿ: ಅಕ್ರಮ ಬೆಟ್ಟಿಂಗ್ ಆ್ಯಪ್ ಕೇಸ್ – ಇಡಿ ವಿಚಾರಣೆಗೆ ಹಾಜರಾದ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್
