ಉದಯವಾಹಿನಿ, ಥಾಣೆ: ಕಾಲೇಜು ವಿದ್ಯಾರ್ಥಿನಿಯೊಬ್ಬಳ ಮೇಲೆ ಐದು ತಿಂಗಳಿಗೂ ಹೆಚ್ಚು ಕಾಲ ಸಾಮೂಹಿಕ ಅತ್ಯಾಚಾರ ನಡೆಸಿರುವ ಏಳು ಮಂದಿ ಆರೋಪಿಗಳನ್ನು ಬಂಧಿಸಲಾಗಿದ್ದು, ಅವರನ್ನು ಎಂಟು ದಿನಗಳ ಪೊಲೀಸ್ ಕಸ್ಟಡಿಗೆ ಒಪ್ಪಿಸಲಾಗಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಕಲ್ಯಾಣ ನಗರದಲ್ಲಿ 17 ವರ್ಷದ ಯುವತಿಯ ಮೇಲೆ ಏಳು ಮಂದಿ ಸುಮಾರು ಐದು ತಿಂಗಳ ಕಾಲ ಕೂಡಿ ಹಾಕಿ ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ. ಎಲ್ಲಾ ಆರೋಪಿಗಳನ್ನು ಬಂಧಿಸಿ ಸ್ಥಳೀಯ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಯಿತು.
ಕಾಲೇಜು ವಿದ್ಯಾರ್ಥಿನಿಯಾಗಿದ್ದ ಯುವತಿ ಕಳೆದ ಏಪ್ರಿಲ್‌ನಲ್ಲಿ ಇನ್‌ಸ್ಟಾಗ್ರಾಮ್‌ನಲ್ಲಿ ಭೇಟಿಯಾದ ಯುವಕನೊಂದಿಗೆ ಸಂಬಂಧ ಬೆಳೆಸಿದ್ದು, ಆತ ಆಕೆಯ ಒಪ್ಪಿಗೆಯಿಲ್ಲದೆ ಅವರ ಲೈಂಗಿಕ ಸಂಪರ್ಕಗಳನ್ನು ವಿಡಿಯೋ ಮಾಡಿ ಆಕೆಯನ್ನು ಬೆದರಿಸಲು ಪ್ರಾರಂಭಿಸಿದ್ದಾನೆ. ಅನಂತರ ಅವರ ವಿಡಿಯೋಗಳನ್ನು ತನ್ನ ಇತರ ಸ್ನೇಹಿತರೊಂದಿಗೆ ಹಂಚಿಕೊಂಡಿದ್ದನು.
ಅವರೆಲ್ಲರೂ ಸೇರಿ ಯುವತಿಯನ್ನು ಬ್ಲ್ಯಾಕ್‌ಮೇಲ್ ಮಾಡಲು ಪ್ರಾರಂಭಿಸಿದರು. ಅಲ್ಲದೇ ಆಕ್ಷೇಪಾರ್ಹ ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಮಾಡುವುದಾಗಿ ಬೆದರಿಕೆ ಹಾಕಲು ಪ್ರಾರಂಭಿಸಿದರು. ಇದರಿಂದ ಹೆದರಿದ ಬಾಲಕಿ ಅವರೊಂದಿಗೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾಳೆ. ಇದು ಸುಮಾರು ಐದು ತಿಂಗಳ ಕಾಲ ನಡೆದಿದೆ. ಆದರೂ ಸಂತ್ರಸ್ತೆಯ ಆಕ್ಷೇಪಾರ್ಹ ವಿಡಿಯೊಗಳು ಆನ್‌ಲೈನ್‌ನಲ್ಲಿ ಪ್ರಸಾರವಾಗುತ್ತಿರುವುದನ್ನು ಸಂತ್ರಸ್ತೆಯ ಕುಟುಂಬ ನೋಡಿದ್ದು, ಈ ಬಗ್ಗೆ ಬಾಲಕಿಯನ್ನು ವಿಚಾರಿಸಿದಾಗ ಆಕೆ ಎಲ್ಲ ಸತ್ಯವನ್ನು ಹೇಳಿದ್ದಾಳೆ. ಕೂಡಲೇ ಯುವತಿಯೊಂದಿಗೆ ಪೊಲೀಸ್ ಠಾಣೆಗೆ ತೆರಳಿದ ಕುಟುಂಬಸ್ಥರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!