ಉದಯವಾಹಿನಿ, ನವದೆಹಲಿ: 15ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ದೆಹಲಿಯ ವಸಂತ್ ಕುಂಜ್‌ನಲ್ಲಿರುವ ಪ್ರಸಿದ್ಧ ಆಶ್ರಮದ ನಿರ್ದೇಶಕ, ಸ್ವಯಂ ಘೋಷಿತ ದೇವಮಾನವ ಸ್ವಾಮಿ ಚೈತನ್ಯಾನಂದ ಸರಸ್ವತಿ ಅಲಿಯಾಸ್ ಪಾರ್ಥ್ ಸಾರಥಿ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದೆಹಲಿ ಪೊಲೀಸರು ಸ್ವಾಮಿ ಚೈತನ್ಯಾನಂದ ಸರಸ್ವತಿ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಬೆನ್ನಲ್ಲೇ ಬಂಧನ ಭೀತಿಯಿಂದ ಆರೋಪಿ ಪರಾರಿಯಾಗಿದ್ದು, ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್ಮೆಂಟ್ ಇನ್ಸ್ಟಿಟ್ಯೂಟ್ ನ ಹಲವಾರು ವಿದ್ಯಾರ್ಥಿನಿಯರು ಲೈಂಗಿಕ ಕಿರುಕುಳ ಆರೋಪ ಹೊರಿಸಿದ ನಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಪ್ರಕರಣ ಸಂಬಂಧ ಪೊಲೀಸರು ಶ್ರೀ ಶಾರದಾ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯನ್ ಮ್ಯಾನೇಜ್‌ಮೆಂಟ್‌ನಲ್ಲಿ ಇಡಬ್ಲ್ಯೂಎಸ್ ವಿದ್ಯಾರ್ಥಿವೇತನದಡಿಯಲ್ಲಿ ಪಿಜಿಡಿಎಂ (ಸ್ನಾತಕೋತ್ತರ ಡಿಪ್ಲೊಮಾ) ಪಡೆಯುತ್ತಿರುವ 32 ಮಹಿಳಾ ವಿದ್ಯಾರ್ಥಿಗಳ ಹೇಳಿಕೆಗಳನ್ನು ದಾಖಲಿಸಿಕೊಂಡಿದ್ದಾರೆ. ಆಗಸ್ಟ್ 4 ರಂದು ವಸಂತ್ ಕುಂಜ್ ಉತ್ತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರ ಪ್ರಕಾರ, ಆರೋಪಿಯು ಸಂಸ್ಥೆಯ ಸಂಚಾಲಕ (ವ್ಯವಸ್ಥಾಪನಾ ಸಮಿತಿಯ ಸದಸ್ಯ) ಆಗಿದ್ದ ಎಂದು ತಿಳಿದು ಬಂದಿದೆ.
