ಉದಯವಾಹಿನಿ, ಮುಂಬೈ: ಮುಂಬೈ ಸೇರಿದಂತೆ ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಶನಿವಾರ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ.ಮುಂಬೈನಲ್ಲಿ ಗುಡುಗು, ಮಿಂಚು ಸಹಿತ ಮುಂದಿನ 24 ಗಂಟೆಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಪಾಲ್ಘರ್, ಪುಣೆ, ಥಾಣೆ ಮತ್ತು ರಾಯಗಡ್ ಸೇರಿದಂತೆ ಹಲವೆಡೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಜಲ್ನಾ, ಬೀಡ್ ಮತ್ತು ಸೋಲಾಪುರದಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.
ಮುಂಬೈ ನಗರದಲ್ಲಿ ಮೋಡ ಕವಿದ ವಾತಾವರಣವಿದ್ದು, ಪಾಲ್ಘರ್, ಥಾಣೆ ಮತ್ತು ರಾಯಗಡ್‌ನಲ್ಲಿ ಸೋಮವಾರದವರೆಗೂ (ಸೆ.29) ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ. ಅಲ್ಲದೇ ಅಕ್ಟೋಬರ್ ಎರಡನೇ ವಾರದವರೆಗೂ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.
