ಉದಯವಾಹಿನಿ, ದುಬೈ: ‌ಕೋಟ್ಯಂತರ ಜನರ ಮುಂದೆಯೇ ಪಾಕಿಸ್ತಾನ ಕ್ರಿಕೆಟ್‌ ತಂಡದ ನಾಯಕ ಸಲ್ಮಾನ್‌ ಅಲಿ ಅಘಾ ಭಾರತದ ಆಪರೇಷನ್‌ ಸಿಂಧೂರ ಪರಾಕ್ರಮವನ್ನ ಒಪ್ಪಿಕೊಂಡಿದ್ದಾರೆ. ಪೋಸ್ಟ್‌ ಪ್ರೆಸೆಂಟೇಷನ್‌ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತದ ʻಆಪರೇಷನ್ ಸಿಂಧೂರʼ ಸಮಯದಲ್ಲಿ ಮೃತರಾದ ಪಾಕಿಸ್ತಾನಿ ನಾಗರಿಕರ ಕುಟುಂಬಕ್ಕೆ ಪಂದ್ಯ ಶುಲ್ಕವನ್ನು ಪಾಕ್‌ ತಂಡವು ದಾನ ಮಾಡಲಿದೆ ಎಂದು ಘೋಷಿಸಿದರು.

ಮೈದಾನದಲ್ಲಿ ಭಾರೀ ಹೈಡ್ರಾಮಾ: ಏಷ್ಯಾ ಕಪ್ ಫೈನಲ್‌ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಗೆದ್ದರೂ, ಏಷ್ಯಾ ಕಪ್ ಟ್ರೋಫಿ ತಂಡದ ಕೈ ಸೇರಿಲ್ಲ. ಏಷ್ಯನ್ ಕ್ರಿಕೆಟ್ ಕೌನ್ಸಿಲ್ (ACC) ಅಧ್ಯಕ್ಷ ಮತ್ತು ಪಾಕಿಸ್ತಾನದ ಸಚಿವ ಮೊಹ್ಸಿನ್ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಇಂಡಿಯಾ ತಂಡ ನಿರಾಕರಿಸಿದ ಕಾರಣ ವಿಜೇತ ತಂಡಕ್ಕೆ ಟ್ರೋಫಿಯನ್ನು ನೀಡದ ವಿಚಿತ್ರ ಘಟನೆ ನಡೆಯಿತು. ತಡರಾತ್ರಿ ನಡೆದ ಈ ನಾಟಕೀಯ ಬೆಳವಣಿಗೆಯಿಂದಾಗಿ, ಸೂರ್ಯಕುಮಾರ್ ಯಾದವ್ ನೇತೃತ್ವದ ಭಾರತೀಯ ತಂಡವು ಟ್ರೋಫಿ ಇಲ್ಲದೆಯೇ ತಮ್ಮ ವಿಜಯ ಆಚರಿಸಬೇಕಾಯಿತು.
ಭಾನುವಾರ ನಡೆದ ಹೈವೋಲ್ಟೇಜ್ ಫೈನಲ್ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು 5 ವಿಕೆಟ್‌ಗಳಿಂದ ಮಣಿಸಿದ ಭಾರತ, ಪ್ರಶಸ್ತಿ ಪ್ರದಾನ ಸಮಾರಂಭಕ್ಕಾಗಿ ಕಾಯುತ್ತಿತ್ತು. ಆದರೆ, ವಿಜೇತರ ಟ್ರೋಫಿಯನ್ನು ಯಾರು ನೀಡುತ್ತಾರೆ ಎಂದು ಭಾರತೀಯ ತಂಡದ ಆಡಳಿತ ಮಂಡಳಿ ವಿಚಾರಿಸಿದಾಗ, ಅದು ಎಸಿಸಿ ಮುಖ್ಯಸ್ಥ ಮೊಹ್ಸಿನ್ ನಖ್ವಿ ಎಂದು ತಿಳಿದು ಬಂತು. ಪಾಕಿಸ್ತಾನಿ ಸಚಿವರಾಗಿರುವ ನಖ್ವಿ ಅವರಿಂದ ಟ್ರೋಫಿ ಸ್ವೀಕರಿಸಲು ಭಾರತ ತಂಡವು ಸ್ಪಷ್ಟವಾಗಿ ನಿರಾಕರಿಸಿತು.

Leave a Reply

Your email address will not be published. Required fields are marked *

error: Content is protected !!