ಉದಯವಾಹಿನಿ, ಬೆಂಗಳೂರು: ಬೆಂಬಲ ಬೆಲೆಯಲ್ಲಿ ಸೋಯಾಬಿನ್ ಮತ್ತು ಶೇಂಗಾ ಖರೀದಿ ಮಾಡಲು ಖರೀದಿ ಕೇಂದ್ರ ಆರಂಭಕ್ಕೆ ತ್ವರಿತವಾಗಿ ಕ್ರಮ ಕೈಗೊಳ್ಳಬೇಕು ಹಾಗೂ ನೋಂದಣಿ ಮತ್ತು ಖರೀದಿ ಪ್ರಕ್ರಿಯೆಯನ್ನು ಏಕಕಾಲಕ್ಕೆ ಆರಂಭಿಸಬೇಕು ಎಂದು ಸಚಿವ ಶಿವಾನಂದ ಪಾಟೀಲ್ ಜಿಲ್ಲಾ ಟಾಸ್ಕ್‌ ಫೋರ್ಸ್‌ ಸಮಿತಿಗಳಿಗೆ ಸೂಚಿಸಿದ್ದಾರೆ.
ಸೋಯಾಬಿನ್‌ಗೆ ಕ್ವಿಂಟಾಲ್‌ಗೆ 5,328 ರೂ. ಹಾಗೂ ಶೇಂಗಾಗೆ 7,623 ರೂ. ಬೆಂಬಲ ಬೆಲೆ ನಿಗದಿಪಡಿಸಲಾಗಿದೆ. ಬೀದರ್, ಬೆಳಗಾವಿ, ಧಾರವಾಡ, ಹಾವೇರಿ, ಯಾದಗಿರಿ, ಕಲಬುರಗಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಸೋಯಾಬಿನ್ ಹಾಗೂ ಕೊಪ್ಪಳ, ಧಾರವಾಡ, ಹಾವೇರಿ, ವಿಜಯನಗರ, ಬಳ್ಳಾರಿ, ಚಿತ್ರದುರ್ಗ, ಗದಗ, ಬಾಗಲಕೋಟೆ, ದಾವಣಗೆರೆ, ರಾಯಚೂರು, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಶೇಂಗಾ ಖರೀದಿ ಮಾಡಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
ನಾಫೆಡ್, ಎನ್‌ಸಿಸಿಎಫ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾ ಮಂಡಲವನ್ನು ಖರೀದಿಗೆ ಏಜನ್ಸಿಯಾಗಿ ನೇಮಕ ಮಾಡಲಾಗಿದೆ. ನೋಂದಣಿಗೆ 80 ದಿನ ಹಾಗೂ ಖರೀದಿಗೆ 90 ದಿನ ನಿಗದಿಪಡಿಸಲಾಗಿದೆ ಎಂದರು.
ಅಗತ್ಯಕ್ಕೆ ಅನುಗುಣವಾಗಿ ಖರೀದಿ ಕೇಂದ್ರಗಳನ್ನು ಆರಂಭಿಸಬೇಕು, ಖರೀದಿ ಕೇಂದ್ರಗಳಲ್ಲಿ ಲೋಪಗಳಾಗದಂತೆ ಎಚ್ಚರಿಕೆ ವಹಿಸಬೇಕು ಹಾಗೂ ಮಾರ್ಗಸೂಚಿ ಅನ್ವಯ ಖರೀದಿ ಮಾಡಲಾಗುತ್ತಿದೆಯೇ? ಎಂಬ ಬಗ್ಗೆ ನಿರಂತರವಾಗಿ ನಿಗಾ ವಹಿಸಬೇಕು ಎಂದು ಸಂಬಂಧಪಟ್ಟ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

Leave a Reply

Your email address will not be published. Required fields are marked *

error: Content is protected !!