ಉದಯವಾಹಿನಿ, ಬೆಂಗಳೂರು: ಎಲ್ಲಾ ಸಮಾಜದ ಮುಂದಿನ ಪೀಳಿಗೆಗೆ ನ್ಯಾಯ ಒದಗಿಸಲು ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯಲ್ಲಿ ಭಾಗವಹಿಸಿ ಅಗತ್ಯ ಮಾಹಿತಿಗಳನ್ನು ನೀಡಬೇಕು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಸಾರ್ವಜನಕರಲ್ಲಿ ಮನವಿ ಮಾಡಿದ್ದಾರೆ.
ಜಿಬಿಎ ವ್ಯಾಪ್ತಿಯಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗತಿ ಸಮೀಕ್ಷೆಗೆ ಚಾಲನೆ ನೀಡಿದರು.
ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಇಂದಿನಿಂದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಆರಂಭವಾಗುತ್ತಿದ್ದು, ನನ್ನ ಮನೆಯಲ್ಲೂ ಸಮೀಕ್ಷೆ ನಡೆಸಿದ್ದಾರೆ. ನಾನು ಎಲ್ಲಾ ಮಾಹಿತಿ ನೀಡಿದ್ದೇನೆ. ಸಾರ್ವಜನಿಕರು ಕೂಡ ತಾಳ್ಮೆಯಿಂದ ನಿಮ್ಮ ಮಾಹಿತಿ ಒದಗಿಸಿಕೊಡಬೇಕು. ಈ ಸಮೀಕ್ಷೆಗೆ ಎಲ್ಲಾ ಜಾತಿ ಸಮುದಾಯದವರು ಸಹಕಾರ ನೀಡಬೇಕು ಎಂದು ಮನವಿ ಮಾಡುತ್ತೇನೆ ಎಂದಿದ್ದಾರೆ. ಹೆಚ್ಚು ಪ್ರಶ್ನೆಗಳಿದ್ದು ಸರಳೀಕರಣ ಮಾಡಬೇಕಿತ್ತು ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾನು ಕೂಡ ಇಂದೇ ಈ ಪ್ರಶ್ನೆಗಳನ್ನು ನೋಡಿದೆ. ಇವುಗಳನ್ನು ಸರಳೀಕರಣ ಮಾಡಬೇಕಿತ್ತು. ನಗರ ಪ್ರದೇಶದಲ್ಲಿ ಜನರಿಗೆ ತಾಳ್ಮೆ ಕಡಿಮೆಯಿದೆ ಎಂದು ಹೇಳಿದ್ದಾರೆ.
