ಉದಯವಾಹಿನಿ, ಬೆಂಗಳೂರು: ಸರ್ಕಾರಿ ಆಸ್ಪತ್ರೆಗೆ ಬರುವವರೆಲ್ಲಾ ಬಡ-ಮಧ್ಯಮ ವರ್ಗದವರು. ಇವರಿಗೂ ಅತ್ಯುತ್ತಮ ಆರೋಗ್ಯ ಸೇವೆ ಒದಗಿಸಲು ಪ್ರತಿ ಜಿಲ್ಲೆಗೆ ಒಂದು ಸರ್ಕಾರಿ ಮೆಡಿಕಲ್ ಕಾಲೇಜು ಒಂದು ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ನಿರ್ಮಿಸುವುದು ನನ್ನ ಗುರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಬೆಳಗಾವಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಆವರಣದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡದ ಉದ್ಘಾಟನೆ ಹಾಗೂ ಗೃಹ ವೈದ್ಯರ ವಸತಿ ನಿಲಯ ಕಟ್ಟಡ ನಿರ್ಮಾಣ ಕಾಮಗಾರಿಯ ಉದ್ಘಾಟನೆ, ಬೆಳಗಾವಿ ಸ್ಮಾರ್ಟ್ ಸಿಟಿ ಅನುದಾನದಲ್ಲಿ ನಿರ್ಮಾಣಗೊಂಡ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಬೆಳಗಾವಿ ಬಸ್ ನಿಲ್ದಾಣದ ಉದ್ಘಾಟನೆ, ರಾಣಿ ಚನ್ನಮ್ಮ ವಿವಿಯ ಹಿರೇಬಾಗೇವಾಡಿ ಹೊಸ ಆವರಣದಲ್ಲಿ ಪಿ.ಎಂ ಉಷಾ ವಿವಿಧ ಕಟ್ಟಡಗಳ ಹಾಗೂ ರಾಷ್ಟ್ರೀಯ ಹೆದ್ದಾರಿಯಿಂದ ವಿವಿಯ ನೂತನ ಆವರಣಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಕಾಮಗಾರಿಗಳ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
