ಉದಯವಾಹಿನಿ,ಗುವಾಹಟಿ: 16 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿ ನಂತರ ಶವವನ್ನು ನದಿಗೆ ಎಸೆದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದಾರೆ. ಗುವಾಹಟಿಯಲ್ಲಿರುವ ಕಮ್ರೂಪ್ (ಮೆಟ್ರೋ) ಜಿಲ್ಲೆಯಲ್ಲಿ ಈ ಘಟನೆ ವರದಿಯಾಗಿದೆ. 8ನೇ ತರಗತಿ ವಿದ್ಯಾರ್ಥಿನಿಯಾಗಿರುವ ಬಾಲಕಿ ತನ್ನ ಫೋನ್‌ಗೆ ರೀಚಾರ್ಜ್ ಮಾಡಿಸಲು ತೆರಳಿದ್ದು, ವಾಪಸ್ ಬಂದಿಲ್ಲ. ಆಕೆಯ ಶವ ಸೋನಾಪುರದ ದಿಗರು ನದಿಯಲ್ಲಿ ಪತ್ತೆಯಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಘಟನೆ ವಿರುದ್ಧ ಸ್ಥಳೀಯರು ಸೋನಾಪುರ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಿದರು. ಶೀಘ್ರ ಕ್ರಮ ಕೈಗೊಂಡು ತಪ್ಪಿತಸ್ಥರಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಪ್ರತಿಭಟನಾಕಾರರು ಒತ್ತಾಯಿಸಿದರು. ಇದೀಗ ಆರೋಪಿ ಆಟೋ ರಿಕ್ಷಾ ನಿರ್ವಾಹಕನನ್ನು ಪೊಲೀಸರು ಬಂಧಿಸಿದ್ದಾರೆ. ಈತ ಅಪರಾಧವನ್ನು ಒಪ್ಪಿಕೊಂಡಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
