ಉದಯವಾಹಿನಿ, ಭುವನೇಶ್ವರ: ಕಟಕ್ ನಗರದ ದರ್ಘಾ ಬಜಾರ್‌ನಲ್ಲಿ ಭಾನುವಾರ ದುರ್ಗಾ ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಉಂಟಾದ ಗುಂಪು ಘರ್ಷಣೆಯಲ್ಲಿ ಎಂಟು ಮಂದಿ ಗಾಯಗೊಂಡಿದ್ದಾರೆ. ಕಟಕ್ ಡಿಸಿಪಿ ರಿಷಿಕೇಶ್ ಖಿಲಾರಿ ಅವರಿಗೂ ಗಾಯಗಳಾಗಿದ್ದು, ಅವರನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಿಂಸಾಚಾರದ ಬಳಿಕ ಕಟಕ್ ನಗರದಲ್ಲಿ ಕರ್ಫ್ಯೂ ವಿಧಿಸಲಾಗಿದ್ದು, 36 ಗಂಟೆಗಳ ಕಾಲ ಇಂಟರ್‌ನೆಟ್ ಸ್ಥಗಿತಗೊಳಿಸಲಾಗಿದೆ. ಶಾಂತಿ ಕಾಪಾಡುವಂತೆ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ನಗರದ ಜನರಲ್ಲಿ ಮನವಿ ಮಾಡಿದ್ದಾರೆ.
ಕಟಕ್‌ನಲ್ಲಿ ಶಾಂತಿಗೆ ಭಂಗ ತಂದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಎಚ್ಚರಿಸಿರುವ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ, ನಗರದ ಜನತೆ ಶಾಂತಿಯಿಂದ ಇರುವಂತೆ ಮನವಿ ಮಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಪೊಲೀಸ್ ಆಯುಕ್ತ ಎಸ್. ದೇವ್ ದತ್ತ ಸಿಂಗ್, ಕಟಕ್ ನಗರದ 13 ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿಯಿಂದ ಕರ್ಫ್ಯೂ ವಿಧಿಸಲಾಗಿದೆ. ಭಾನುವಾರ ಸಂಜೆ 7 ಗಂಟೆಯಿಂದ 36 ಗಂಟೆಗಳ ಕಾಲ ಇಂಟರ್‌ನೆಟ್ ಮತ್ತು ಸಾಮಾಜಿಕ ಮಾಧ್ಯಮ ಸೇವೆಗಳ ಮೇಲೆ ನಿಷೇಧ ಹೇರಲಾಗಿದೆ ಎಂದು ತಿಳಿಸಿದ್ದಾರೆ.
