ಉದಯವಾಹಿನಿ, ಶಿಮ್ಲಾ: ಹಿಮಾಚಲ ಪ್ರದೇಶದ ಬಿಲಾಸ್ಪುರ ಜಿಲ್ಲೆಯಲ್ಲಿ ಮಂಗಳವಾರ ಸಂಜೆ ಸಂಭವಿಸಿದ ಭಾರಿ ಭೂಕುಸಿತದಲ್ಲಿ ಖಾಸಗಿ ಬಸ್ ಅವಶೇಷಗಳ ಅಡಿಯಲ್ಲಿ ಹೂತುಹೋಗಿದ್ದು, ಕನಿಷ್ಠ 18 ಜನರು ಸಾವನ್ನಪ್ಪಿದ್ದಾರೆ. ಬಸ್‌ನಲ್ಲಿ 30 ರಿಂದ 35 ಪ್ರಯಾಣಿಕರು ಪ್ರಯಾಣಿಸುತ್ತಿದ್ದರು. ಹರಿಯಾಣದ ರೋಹ್ಟಕ್‌ನಿಂದ ಬಿಲಾಸ್ಪುರ್ ಬಳಿಯ ಘುಮಾರ್ವಿನ್‌ಗೆ ತೆರಳುತ್ತಿದ್ದಾಗ ಭೂಕುಸಿತವಾಗಿ ಬಸ್ ಅವಘಟಕ್ಕೆ ಸಿಲುಕಿತು.
ಪ್ರಧಾನಿ ಮೋದಿ ಅವರು, ಮೃತರ ಕುಟುಂಬಗಳಿಗೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ 2 ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50 ಸಾವಿರ ರೂಪಾಯಿ ಪರಿಹಾರ ಘೋಷಿಸಿದ್ದಾರೆ.‘ಹಿಮಾಚಲ ಪ್ರದೇಶದ ಬಿಲಾಸ್ಪುರದಲ್ಲಿ ಸಂಭವಿಸಿದ ಅಪಘಾತದಿಂದ ಜೀವಹಾನಿಯಾಗಿದೆ. ಈ ಕಷ್ಟದ ಸಮಯದಲ್ಲಿ ಸಂತ್ರಸ್ತ ಜನರು ಮತ್ತು ಅವರ ಕುಟುಂಬಗಳೊಂದಿಗೆ ನಾವಿದ್ದೇವೆ. ಗಾಯಗೊಂಡವರು ಶೀಘ್ರ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಪ್ರಧಾನಿ ಕಚೇರಿ ಹೇಳಿಕೆ ತಿಳಿಸಿದೆ. ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ಕೂಡ ಅಪಘಾತಕ್ಕೆ ದುಃಖ ವ್ಯಕ್ತಪಡಿಸಿದ್ದು, ರಕ್ಷಣಾ ಕಾರ್ಯಾಚರಣೆ ಕೈಗೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
