ಉದಯವಾಹಿನಿ, ವಾಷಿಂಗ್ಟನ್: ಇಸ್ರೇಲ್ ಮತ್ತು ಗಾಜಾ ನಡುವಿನ ಶಾಂತಿ ಒಪ್ಪಂದದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಧ್ಯಸ್ಥಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಸ್ವಾಗತಿಸಿದ್ದಾರೆ. ಟ್ರಂಪ್ ಅವರ 20 ಅಂಶಗಳ ಗಾಜಾ ಶಾಂತಿ ಯೋಜನೆಯ ಮೊದಲ ಹಂತದ ಬಗ್ಗೆ ಮೆಚ್ಚುಗೆಯ ನುಡಿಗಳನ್ನಾಡಿರುವ ಪ್ರಧಾನಿ ಮೋದಿ, ಇದನ್ನು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಬಲವಾದ ನಾಯಕತ್ವದ ಪ್ರತಿಬಿಂಬ ಎಂದು ಕರೆದಿದ್ದಾರೆ.
Xನಲ್ಲಿ ಪೋಸ್ಟ್ ಮಾಡಿದ ಪ್ರಧಾನಿ ಮೋದಿ, ಒತ್ತೆಯಾಳುಗಳ ಬಿಡುಗಡೆ ಮತ್ತು ಹೆಚ್ಚಿದ ಮಾನವೀಯ ನೆರವು ಗಾಜಾದ ಜನರಿಗೆ ಕೊಂಚ ನಿರಾಳತೆಯನ್ನು ತರುತ್ತದೆ ಮತ್ತು ಶಾಶ್ವತ ಶಾಂತಿ ಒಪ್ಪಂದಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಆಶಯ ವ್ಯಕ್ತ ಪಡಿಸಿದ್ದಾರೆ. ವಶಕ್ಕೆ ಪಡೆದಿರುವ ಪ್ರದೇಶದಲ್ಲಿ ಎರಡು ವರ್ಷಗಳ ಕಾಲ ನಡೆದ ಯುದ್ಧವನ್ನು ಕೊನೆಗೊಳಿಸುವ ತನ್ನ ಶಾಂತಿ ಯೋಜನೆಯ ಭಾಗವಾಗಿ ಇಸ್ರೇಲ್ ಮತ್ತು ಹಮಾಸ್ ಒತ್ತೆಯಾಳುಗಳು ಮತ್ತು ಕೈದಿಗಳನ್ನು ಬಿಡುಗಡೆ ಮಾಡಲು ಒಪ್ಪಿಕೊಂಡಿವೆ ಎಂದು ಟ್ರಂಪ್ ಘೋಷಿಸಿದ ಕೆಲವೇ ಗಂಟೆಗಳ ನಂತರ ಪ್ರಧಾನಿಯವರ ಸಂದೇಶ ಬಂದಿದೆ.
