ಉದಯವಾಹಿನಿ, ಹೈದರಾಬಾದ್‌: ಕರ್ನಾಟಕದ ಕೈಗಾರಿಕೋದ್ಯಮಿಗಳು ರಾಜ್ಯದಲ್ಲಿ ಮೂಲಸೌಕರ್ಯ ಕೆಟ್ಟದಾಗಿದೆ, ವಿದ್ಯುತ್ ಕಡಿತವಿದೆ ಎಂದು ಹೇಳುತ್ತಾರೆ. ಕರ್ನಾಟಕ ಮೊದಲು ಆ ಸಮಸ್ಯೆಗಳನ್ನು ಸರಿಪಡಿಸಬೇಕು ಎಂದು ಆಂಧ್ರಪ್ರದೇಶದ ಐಟಿ ಸಚಿವ ನಾರಾ ಲೋಕೇಶ್ ಹೇಳಿದ್ದಾರೆ.
ವಿಶಾಖಪಟ್ಟಣದಲ್ಲಿ ಗೂಗಲ್‌ ಎಐ ಕೇಂದ್ರ ತೆರೆಯುವ ಸಂಬಂಧ ಮಾಡಿಕೊಂಡ ಒಪ್ಪಂದಕ್ಕೆ ಕರ್ನಾಟಕ ನಾಯಕರು ಪ್ರಶ್ನೆ ಮಾಡಿದ್ದಕ್ಕೆ ಸಂಬಂಧಿಸಿದಂತೆ ಕೇಳಲಾದ ಪ್ರಶ್ನೆಗೆ ಸುದ್ದಿಗೋಷ್ಠಿಯಲ್ಲಿ ಅವರು ಉತ್ತರ ನೀಡಿದರು.
ಕಂಪನಿಗಳನ್ನು ಸೆಳೆಯಲು ಅವರು ಅಸಮರ್ಥರಾಗಿದ್ದರೆ ನಾನು ಏನು ಮಾಡಲು ಸಾಧ್ಯವಿಲ್ಲ. ಗೂಗಲ್‌ ಜೊತೆ ಸಹಿ ಹಾಕುವ ಒಂದು ದಿನದ ಮೊದಲು ಹಲವು ರಾಜ್ಯಗಳು ತಮ್ಮ ರಾಜ್ಯಕ್ಕೆ ಬರುವಂತೆ ಪ್ರಯತ್ನ ಮಾಡಿದ್ದವು. ನಾವು ಕೈಗಾರಿಕೆಗಳಿಗೆ ಪ್ರೋತ್ಸಾಹ ನೀಡುತ್ತೇವೆ. ವಿಶಾಖಪಟ್ಟಣದಲ್ಲಿ ಗೂಗಲ್‌ ಕೇಂದ್ರ ತೆರೆಯಲು ನಾವು ಹಲವಾರು ಸಭೆಗಳನ್ನು ನಡೆಸಿದ್ದೇವೆ. ಏನೇನು ಸಮಸ್ಯೆಯಾಗಿತ್ತು ಅವುಗಳನ್ನು ನಾವು ಪರಿಹರಿಸಿಕೊಟ್ಟಿದ್ದೇವೆ ಎಂದರು.
ರಾಜ್ಯ ರಾಜ್ಯಗಳ ಮಧ್ಯೆ ಈ ರೀತಿಯ ಸ್ಪರ್ಧೆ ಇರಬೇಕು. ಸ್ಪರ್ಧೆ ಇದ್ದರೆ ಅಂತಿಮವಾಗಿ ಲಾಭ ಭಾರತಕ್ಕೆ ಆಗಲಿದೆ. ಕಂಪ್ಯೂಟರ್‌ ಕ್ರಾಂತಿಯಾಗುವ ಸಂದರ್ಭದಲ್ಲಿ ಹಲವು ಮಂದಿ ಕಂಪ್ಯೂಟರ್‌ ಆಹಾರ ನೀಡುತ್ತಾ ಎಂದು ಪ್ರಶ್ನಿಸಿದ್ದರು. ಆದರೆ ನಮ್ಮ ಮುಖ್ಯಮಂತ್ರಿಗಳಾದ ಚಂದ್ರಬಾಬು ನಾಯ್ಡು ಅವರು ಅಂದು ಕಂಪನಿಗಳಿಗೆ ಪ್ರೋತ್ಸಾಹ ನೀಡಿದ್ದರಿಂದ ಹೈದರಾಬಾದ್‌ ಇಂದು ಟೆಕ್‌ ಸಿಟಿಯಾಗಿದೆ. ಲಕ್ಷಾಂತರ ಮಂದಿಗೆ ಉದ್ಯೋಗ ನೀಡಿದೆ ಎಂದು ತಿಳಿಸಿದರು.

Leave a Reply

Your email address will not be published. Required fields are marked *

error: Content is protected !!