ಉದಯವಾಹಿನಿ, ಜೈಪುರ: ಚಲಿಸುತ್ತಿದ್ದ ಖಾಸಗಿ ಬಸ್ಸಿನಲ್ಲಿ ಬೆಂಕಿ ಕಾಣಿಸಿಕೊಂಡ ಪರಿಣಾಮ 19 ಮಂದಿ ಪ್ರಯಾಣಿಕರು ಸಜೀವ ದಹನವಾಗಿರುವ ಘಟನೆ ಜೈಸಲ್ಮೇರ್-ಜೋಧಪುರ ಹೆದ್ದಾರಿಯಲ್ಲಿ ನಡೆದಿದೆ. ಒಟ್ಟು 57 ಮಂದಿ ಪ್ರಯಾಣಿಕರನ್ನು ಜೈಸಲ್ಮೇರ್‌ನಿಂದ ಜೋಧಪುರಕ್ಕೆ ಹೊತ್ತೊಯ್ಯುತ್ತಿದ್ದ ಖಾಸಗಿ ಬಸ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ಚಾಲಕ ಬಸ್ ಅನ್ನು ರಸ್ತೆಬದಿಯಲ್ಲಿ ನಿಲ್ಲಿಸಿದ್ದಾನೆ. ಅಷ್ಟುಹೊತ್ತಿಗಾಗಲೇ ಬೆಂಕಿ ಸಂಪೂರ್ಣ ಬಸ್ ಅನ್ನು ಆವರಿಸಿಕೊಂಡಿದ್ದು, 19 ಮಂದಿ ಪ್ರಯಾಣಿಕರು ಮೃತಪಟ್ಟಿದ್ದಾರೆ.
ಘಟನೆ ನಡೆದ ತಕ್ಷಣವೇ ಸ್ಥಳೀಯರು ಮತ್ತು ದಾರಿಹೋಕರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆಗೆ ಮುಂದಾಗಿದ್ದಾರೆ. ಅಲ್ಲದೇ ಅಗ್ನಿಶಾಮಕ ದಳ ಮತ್ತು ಪೊಲೀಸರಿಗೆ ಮಾಹಿತಿ ನೀಡಲಾಯಿತು. ಘಟನೆಯಲ್ಲಿ ಗಾಯಗೊಂಡ ಪ್ರಯಾಣಿಕರನ್ನು ಚಿಕಿತ್ಸೆಗಾಗಿ ಜೈಸಲ್ಮೇರ್‌ನ ಜವಾಹರ್ ಆಸ್ಪತ್ರೆಗೆ ರವಾನಿಸಲಾಗಿದೆ. ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಕಾಣಿಸಿಕೊಂಡಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ ಜೈಸಲ್ಮೇರ್ ಜಿಲ್ಲಾಡಳಿತವು ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ತಕ್ಷಣವೇ ಪ್ರಾರಂಭಿಸಿದೆ.
