ಉದಯವಾಹಿನಿ, ಬೆಂಗಳೂರು: ರಾಜ್ಯದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ ನೀಡಿದ ಕಾಂಗ್ರೆಸ್‌ ಸರ್ಕಾರವು ರಾಜಧಾನಿ ಬೆಂಗಳೂರಿನ ಕಾಡುಗೋಡಿಯಲ್ಲಿ ಎಲೆಕ್ಟ್ರಾನಿಕ್‌ ಟೆಕ್ನಾಲಜಿ ಪಾರ್ಕ್‌ ನಿರ್ಮಾಣ ಹಾಗೂ ಬಿಇಎಂಎಲ್‌ ಜಮೀನಿನಲ್ಲಿ ಕೈಗಾರಿಕಾ ಟೌನ್‌ಶಿಪ್‌ ಸ್ಥಾಪಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಎಲೆಕ್ಟ್ರಾನಿಕ್ಸ್ ವಲಯದಲ್ಲಿ ಕರ್ನಾಟಕದ ಅಗ್ರಸ್ಥಾನವನ್ನು ಮುಂದುವರೆಸಲು ಪೂರಕವಾಗಿ ರಾಜ್ಯದಲ್ಲಿ ಸೆಮಿಕಂಡಕ್ಟರ್ ವಲಯದ ಅಭಿವೃದ್ಧಿಗೆ ಉತ್ತೇಜನ ನೀಡಲು ಬೆಂಗಳೂರಿನ ಕಾಡುಗೋಡಿಯಲ್ಲಿ 100 ಎಕರೆ ಪ್ರದೇಶದಲ್ಲಿ Technology Innovation Park ಅನ್ನು ಅಭಿವೃದ್ಧಿಪಡಿಸಲಾಗುವುದು. ಇದರಲ್ಲಿ ತಾಂತ್ರಿಕ ಸಂಶೋಧನಾ ಸಂಸ್ಥೆ ಸ್ಥಾಪನೆ ಜೊತೆಗೆ ಸೆಮಿಕಂಡಕ್ಟರ್ ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷೆ, ವಿನ್ಯಾಸ ಇತ್ಯಾದಿಗಳಿಗೆ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು.

ಬೃಹತ್ ‘ಕೈಗಾರಿಕಾ ಟೌನ್‌ಷಿಪ್‌:  ರಾಜ್ಯ ಸರ್ಕಾರವು ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರದ ಸ್ವಾಧೀನದಲ್ಲಿರುವ ಬಿಇಎಂಎಲ್‌ ಜಮೀನಿನಲ್ಲಿ ಬೃಹತ್ ‘ಕೈಗಾರಿಕಾ ಟೌನ್‌ಷಿಪ್‌’ ಅನ್ನು ಅಭಿವೃದ್ಧಿಪಡಿಸಲಾಗುವುದು. ಯಾವುದೇ ಒಂದು ಉದ್ಯಮ ಪ್ರಾರಂಭಿಸಲು ಒಂದೇ ಪೋರ್ಟಲ್ ನಲ್ಲಿ ಅರ್ಜಿ ಸಲ್ಲಿಸಿ, ಬೇಕಾಗುವ ಎಲ್ಲಾ ಪರವಾನಗಿಗಳನ್ನು ಅದೇ ಪೋರ್ಟಲ್‌ನಲ್ಲಿ ಸಕಾಲದಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ಇದರಿಂದ ಉದ್ಯಮಗಳು ಮತ್ತು ಹೂಡಿಕೆಗಳನ್ನು ಆಕರ್ಷಿಸಲು ಅನುಕೂಲವಾಗಲಿದೆ. ಕೃಷಿ ಭೂಮಿ ಪರಿವರ್ತಿಸದೇ ಕೈಗಾರಿಕೆ ಸ್ಥಾಪನೆಗೆ ಅವಕಾಶ: ವಿಜಯಪುರ ಜಿಲ್ಲೆಯಲ್ಲಿ ಉತ್ಪಾದನಾ ಕ್ಲಸ್ಟರ್ ಮತ್ತು ದಕ್ಷಿಣ ಕನ್ನಡದಲ್ಲಿ ರಫ್ತು ಆಧಾರಿತ ಕೈಗಾರಿಕೆಗಳ ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು. ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಸಂಬಂಧಿಸಿದ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಒಂದು ಹೊಸ ನೀತಿಯನ್ನು ಜಾರಿಗೆ ತರಲಾಗುವುದು. ಕೈಗಾರಿಕೆಗಳ ಸ್ಥಾಪನೆಗೆ 2 ಎಕರೆವರೆಗಿನ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಪರಿವರ್ತಿಸದೆ ಬಳಸಲು ಅವಕಾಶ ನೀಡಲಾಗುವುದು. ಇದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಲಾಗುವುದು. ದೇವನಹಳ್ಳಿಯಲ್ಲಿ ಏರೋಸ್ಪೇಸ್‌, ಡಿಫೆನ್ಸ್‌ ಪಾರ್ಕ್‌ ಸ್ಥಾಪನೆ: ಏರೋಸ್ಪೇಸ್ ವಲಯದಲ್ಲಿ ರಾಜ್ಯದ ಬಲವನ್ನು ಮತ್ತಷ್ಟು ವೃದ್ಧಿಸಲು ಮತ್ತು ವಿಶೇಷವಾಗಿ MSME ಗಳ ಮೇಲೆ ಕೇಂದ್ರಿಕರಿಸಲು, ಅತ್ಯಾಧುನಿಕ ಕರ್ನಾಟಕ ಏರೋಸ್ಪೇಸ್ ತಂತ್ರಜ್ಞಾನ ಕೇಂದ್ರವನ್ನು ಬೆಂಗಳೂರಿನ ದೇವನಹಳ್ಳಿ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಪಾರ್ಕ್‌ನಲ್ಲಿ ಸ್ಥಾಪಿಸಲಾಗುವುದು. ರಾಜ್ಯದಲ್ಲಿ ಸಾಮಾನ್ಯ ಸೌಲಭ್ಯ ಕೇಂದ್ರಗಳನ್ನು PPP ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಯೋಜಿಸಿದ್ದು, ಇದರಿಂದ ಯಂತ್ರೋಪಕರಣಗಳು, ಉಪಕರಣಗಳು ಮತ್ತು ಸಾಮೂಹಿಕ ಮೂಲಸೌಲಭ್ಯಗಳನ್ನು MSME ಗಳು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ತಿಳಿಸಿದರು. ರಾಜ್ಯದಲ್ಲಿ 7 ಹೊಸ ಕೈಗಾರಿಕಾ ವಸಾಹತು ಸ್ಥಾಪನೆ: ರಾಜ್ಯದ ಸಾರ್ವಜನಿಕ ಉದ್ದಿಮೆಗಳಲ್ಲಿ ಆಧುನೀಕರಣ ಹಾಗೂ ವೃತ್ತಿಪರತೆಯನ್ನು ತರುವ ಮೂಲಕ ತಮ್ಮ ಚಟುವಟಿಕೆಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು. ಹೊಸ ಉತ್ಪನ್ನ ಮತ್ತು ಸೇವೆಗಳನ್ನು ಪರಿಚಯಿಸಿ, ಮಾರ್ಕೆಟಿಂಗ್ ತಂತ್ರದ ಮೂಲಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪರ್ಧಿಸಲು ಉತ್ತೇಜನ ನೀಡಲಾಗುವುದು. ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ ವತಿಯಿಂದ ಹುಬ್ಬಳ್ಳಿ , ಕಲಬುರಗಿಯ ಚಿತ್ತಾಪುರ, ಉತ್ತರ ಕನ್ನಡದ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ವಿಜಯಪುರದ ಇಂಡಿ ಮತ್ತು ಯಾದಗಿರಿಯ ಶಹಪೂರ ಹೀಗೆ 7 ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಾಹತುಗಳನ್ನು ಹಂತ ಹಂತವಾಗಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ.

 

 

Leave a Reply

Your email address will not be published. Required fields are marked *

error: Content is protected !!